ವರ್ಷಿತ್ ಕುಲಾಲ್

ಉಳ್ಳಾಲ : ಕುತ್ತಾರು ಬಳಿ ಸೋಮವಾರ ರಾತ್ರಿ ನಡೆದಿದ್ದ ಬೈಕ್ ಮತ್ತು ಸ್ಕೂಟರ್ ನಡುವಿನ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು,ವೈದ್ಯರ ಸಲಹೆಯಂತೆ ಪೋಷಕರು ಯುವಕನ ಅಂಗಾಂಗ ದಾನ ಪ್ರಕ್ರಿಯೆಗೆ ಮುಂದಾಗಿದ್ದಾರೆ.

ಕುತ್ತಾರು ಆಯೆರೆ ಬೆಟ್ಟು ನಿವಾಸಿ ಗೋಪಾಲ ಹಾಗೂ ವೇದಾವತಿ ದಂಪತಿಯ ಕಿರಿಯ ಪುತ್ರ ವರ್ಷಿತ್ ಕುಲಾಲ್ (21) ಅಪಘಾತದಲ್ಲಿ ಗಾಯಗೊಂಡ ಯುವಕ.

ವರ್ಷಿತ್ ಸೋಮವಾರ ರಾತ್ರಿ 7.30 ರ ಹೊತ್ತಿಗೆ ಕುತ್ತಾರಿನಿಂದ ತನ್ನ ಮನೆಯ ಕಡೆ ತೆರಳುತ್ತಿದ್ದಾಗ ಕುತ್ತಾರುವಿನ ಆಟೋ ವರ್ಕ್ ಶಾಪ್ ಮುಂಭಾಗದಲ್ಲಿ ರಾಣಿಪುರದಿಂದ ಕುತ್ತಾರು ಕಡೆಗೆ ಬರುತ್ತಿದ್ದ ಸ್ಕೂಟರ್ ಮತ್ತು ವರ್ಷಿತ್ ನ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕಿನಿಂದ ರಸ್ತೆಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡಿದ್ದ ವರ್ಷಿತ್‌ನನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇಂದು ಯೆನೆಪೋಯ ಆಸ್ಪತ್ರೆಯ ವೈದ್ಯರು ವರ್ಷಿತ್ ನ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ಘೋಷಿಸಿದ್ದಾರೆ.

ವರ್ಷಿತ್ ನ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನ ಮಾಡಲಾಗುತ್ತಿದೆ. ಬೆಂಗಳೂರಿನಿಂದ ವೈದ್ಯರ ತಂಡ ಆಗಮಿಸಿದ್ದು, ಮಧ್ಯಾಹ್ನದ ವೇಳೆಗೆ ಅಂಗಾಂಗ ದಾನ ಪ್ರಕ್ರಿಯೆ ಮುಗಿಯಲಿದೆ. ಇದೀಗ ವೈದ್ಯರ ಸಲಹೆಯ ಮೇರೆಗೆ ವರ್ಷಿತ್ ನ ಪೋಷಕರು ಮಗನ ಅಂಗಾಗ ದಾನ‌ ಪ್ರಕ್ರಿಯೆಗೆ ಮುಂದಾಗಿದ್ದಾರೆ. ವರ್ಷಿತ್ ನ ಕಿಡ್ನಿ, ಯಕೃತ್ತು, ಹೃದಯ, ಶ್ವಾಸಕೋಶಕ್ಕೆ ಈಗಾಗಲೇ ವಿವಿಧ ಆಸ್ಪತ್ರೆಗಳಿಂದ ಬೇಡಿಕೆ ಬಂದಿದ್ದು, ಇಂದೇ ಝೀರೋ ಟ್ರಾಫಿಕ್ ಮೂಲಕ ಅಂಗಾಗಗಳ ರವಾನೆ ಪ್ರಕ್ರಿಯೆ ನಡೆಸಲಾಗುತ್ತದೆಯೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸ್ಕೂಟರ್ ಸವಾರ ಧೀರಜ್ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವರ್ಷಿತ್ ಅವಿವಾಹಿತನಾಗಿದ್ದು, ಫ್ಯಾಬ್ರಿಕೇಷನ್ ಕೆಲಸ ನಿರ್ವಹಿಸುತ್ತಿದ್ದನೆನ್ನಲಾಗಿದೆ.

ಮೃತ ವರ್ಷಿತ್ ತಂದೆ, ತಾಯಿ ಹಾಗೂ ಏಕೈಕ ಸಹೋದರನನ್ನು ಅಗಲಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor