×
Ad

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್

Update: 2025-11-17 14:52 IST

ಮಹೇಶ್‌ ಶೆಟ್ಟಿ ತಿಮರೋಡಿ

ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಇದೇ ವೇಳೆ, ಪ್ರಕರಣವನ್ನು ಪುತ್ತೂರು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿರುವ ನ್ಯಾಯಾಲಯ, ಮುಂದಿನ 15 ದಿನಗಳಲ್ಲಿ ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು. ವಿಚಾರಣೆ ವೇಳೆ ಅರ್ಜಿದಾರರ ಅಹವಾಲನ್ನೂ ಆಲಿಸಿ, ನಂತರ ಸೂಕ್ತ ಕಾರಣಗಳೊಂದಿಗೆ ಕಾನೂನು ಪ್ರಕಾರ ಆದೇಶ ಹೊರಡಿಸಬೇಕು ಎಂದು ನಿರ್ದೇಶಿಸಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು.

ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಮುನ್ನ ಅವರಿಗೆ ವಿವರಣೆ ಹಾಗೂ ಮನವಿ ಸಲ್ಲಿಸಲು ಸೂಕ್ತ ಅವಕಾಶ ನೀಡದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದರಿಂದ, ಗಡಿಪಾರು ಆದೇಶ ರದ್ದುಪಡಿಸಲಾಗುತ್ತಿದೆ. ಎರಡನೇ ಪ್ರತಿವಾದಿಯಾಗಿರುವ ಪುತ್ತೂರು ಉಪ ವಿಭಾಗಾಧಿಕಾರಿಯು ಪ್ರಕರಣ ಕುರಿತು ಹೊಸದಾಗಿ ವಿಚಾರಣೆ ನಡೆಸಿ ಕಾನೂನು ಪ್ರಕಾರ ಸೂಕ್ತ ಆದೇಶ ಹೊರಡಿಸಬೇಕು ಎಂದು ಆದೇಶದಲ್ಲಿ ಹೇಳಿದೆ. ವಿಸ್ತೃತ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಅರ್ಜಿದಾರರ ವಾದ:

ಅರ್ಜಿ ವಿಚಾರಣೆ ವೇಳೆ ತಿಮರೋಡಿ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ತಾರಾನಾಥ್‌ ಪೂಜಾರಿ, ಅರ್ಜಿದಾರರ ವಿರುದ್ಧ ಹೊರಡಿಸಲಾಗಿರುವ ಆದೇಶದಲ್ಲಿ ವ್ಯಾಪಕ ಕಾನೂನು ಪ್ರಕ್ರಿಯೆಯ ಲೋಪಗಳಿವೆ. ಯಾವುದೇ ವ್ಯಕ್ತಿಯನ್ನು ಗಡಿಪಾರು ಮಾಡಿ ಆದೇಶಿಸುವ ವೇಳೆ ಕರ್ನಾಟಕ ಪೊಲೀಸ್‌ ಕಾಯ್ದೆಯಡಿ ನಿಗದಿಪಡಿಸಲಾಗಿರುವ ಪ್ರಕ್ರಿಯೆ ಪಾಲಿಸಬೇಕಾಗುತ್ತದೆ. ಅದರಂತೆ, ಗಡಿಪಾರು ಮಾಡಲು ಉದ್ದೇಶಿಸಿರುವ ವ್ಯಕ್ತಿಯ ಮೇಲಿನ ಆರೋಪಗಳು, ಅವರ ನಡವಳಿಕೆಗಳ ಕುರಿತು ಸಂಪೂರ್ಣ ವಿವರ, ಮಾಹತಿ ನೀಡಬೇಕು. ನಂತರ ಅವರ ವಾದ/ಅಹವಾಲುಗಳನ್ನು ಆಲಿಸಿ ಆದೇಶ ಹೊರಡಿಸಬೇಕು. ಈ ಪ್ರಕರಣದಲ್ಲಿ ಗಡಿಪಾರು ಆದೇಶ ಹೊರಡಿಸುವ ಮುನ್ನ ವಿವರಣೆ ನೀಡಲು ಅರ್ಜಿದಾರರಿಗೆ ಉಪ ವಿಭಾಗಾಧಿಕಾರಿಗಳು ಸೂಕ್ತ ಅವಕಾಶ ಕಲ್ಪಿಸಿಲ್ಲ. ಇದರಿಂದ, ಗಡಿಪಾರು ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News