Mangaluru | ಬಜಪೆ- ಕಿನ್ನಿಗೋಳಿ ಪ.ಪಂ ಚುನಾವಣೆ: ಡಿ.19ರಿಂದ ನಿಷೇಧಾಜ್ಞೆ ಜಾರಿ
ಮಂಗಳೂರು,ಡಿ.4: ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಡಿ.19ರ ಸಂಜೆ 5ರಿಂದ 21ರ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ.
ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು, ಮೆರವಣಿಗೆ ಅಥವಾ ಸಭೆ ಸಮಾರಂಭಗಳನ್ನು ಜರುಗಿಸಬಾರದು ಎಂದು ಸೂಚಿಸಲಾಗಿದೆ.
ಸಾರ್ವಜನಿಕರು ಮತದಾನ ಮಾಡಲು ಅನುಕೂಲವಾಗುವಂತೆ ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಡಿ.21ರಂದು ಸಂತೆ, ಜಾತ್ರೆಗಳನ್ನು ನಿಷೇಧಿಸಲಾಗಿದೆ. ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ಹಾಗೂ ಸ್ಪೋಟಕ ವಸ್ತುಗಳನ್ನು ಕೊಂಡೊಯ್ಯುವುದನ್ನು ಪ್ರತಿಬಂಧಿಸಲಾಗಿದೆ.
ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಪೂರ್ವ ನಿಯೋಜಿತ ಮದುವೆ, ಧಾರ್ಮಿಕ ಕಾರ್ಯಕ್ರಮ/ಮೆರವಣಿಗೆಗಳನ್ನು ಮತ್ತು ಶವಸಂಸ್ಕಾರಗಳನ್ನು ಚುನಾವಣಾ ನೀತಿ ಸಂತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮದ್ಯದಂಗಡಿ ಮುಚ್ಚಲು ಆದೇಶ :
ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಡಿ.19ರ ಸಂಜೆ 5ರಿಂದ 21ರ ರಾತ್ರಿ 12ರವರೆಗೆ ಶುಷ್ಕ ದಿನ (Dry Day) ಎಂದು ಘೋಷಿಸಲಾಗಿದೆ. ಈ ವೇಳೆ ಎಲ್ಲಾ ವಿಧದ ಮದ್ಯದಂಗಡಿಗಳು, ಮದ್ಯ ತಯಾರಿಕಾ ಘಟಕಗಳು, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ.