×
Ad

ಮಂಗಳೂರು ನಗರದಲ್ಲಿ ನೀರಿನ ಸಮಸ್ಯೆಯ ಬಗ್ಗೆ ಮನಪಾ ನಿರ್ಲಕ್ಷ್ಯ ಖಂಡನೀಯ: ಶಾಸಕ ವೇದವ್ಯಾಸ ಕಾಮತ್

Update: 2025-11-20 16:45 IST

ಮಂಗಳೂರು: ಮಂಗಳೂರು ನಗರಕ್ಕೆ ಕುಡಿಯುವ ನೀರಿನ ಪೂರೈಕೆ ಮಾಡುವ ಕೊಳವೆ ಒಡೆದು ಹೋಗಿರುವ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಜನಸಾಮಾನ್ಯರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದರೂ, ರಾಜ್ಯ ಕಾಂಗ್ರೆಸ್ ಸರಕಾರದ ಅಧೀನದಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ಖಂಡನೀಯ ಎಂದು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದ್ದಾರೆ.

ನಗರದ ತಮ್ಮ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದದ ವಾಸಿಸುತ್ತಿರುವ ಲಕ್ಷಾಂತರ ಜನರಿಗೆ ನೀರಿಲ್ಲದ ವಾತಾವರಣ ಸೃಷ್ಟಿಯಾಗಿದ್ದರೂ ಪರ್ಯಾಯ ವ್ಯವಸ್ಥೆ ಮಾಡದೆ ಮೌನವಾಗಿರುವುದು ಬೇಜವಾಬ್ದಾರಿಯ ಪರಮಾವಧಿಯಾಗಿದೆ ಎಂದರು.

ʼಮಂಗಳೂರು ಆಯುಷ್ ಇಲಾಖೆಯಲ್ಲಿ ಭ್ರಷ್ಟಾಚಾರʼ:

ಮಂಗಳೂರು ಆಯುಷ್ ನಲ್ಲಿ ಔಷದ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದ್ದು, ಅಧಿಕಾರಿಗಳು ಹಣದ ಆಸೆಗೆ ಅವಧಿ ಮೀರಿದ ಔಷಧ ಪೂರೈಕೆ ಮಾಡಿ ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದ ವೇದವ್ಯಾಸ ಕಾಮತ್ ಅವರು ಈ ವಿಚಾರ ತನ್ನ ಗಮನಕ್ಕೆ ಬಂದ ಕೂಡಲೇ ದಾಖಲೆಗಳ ಸಮೇತ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲೂ ಪ್ರಸ್ತಾಪಿಸಿದ್ದೇನೆ. ಆದರೂ ಯಾವುದೇ ಸೂಕ್ತ ಕ್ರಮವಾಗಿರಲಿಲ್ಲ. ಇದೀಗ ಅಲ್ಲಿಗೆ ಲೋಕಾಯುಕ್ತ ದಾಳಿ ನಡೆದಿದ್ದು ಆರೋಪಕ್ಕೆ ಪೂರಕವಾಗಿ ಕೆಲವು ದಾಖಲೆಗಳು ಲಭ್ಯವಾಗಿದೆ ಎಂಬ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿದೆ. ಯಾವುದೇ ಒತ್ತಡಕ್ಕೆ ಒಳಗಾಗದೇ ಸೂಕ್ತ ತನಿಖೆ ಮುಂದುವರಿದರೆ ಮತ್ತಷ್ಟು ವಿಷಯಗಳು, ಕಾಣದ ಕೈಗಳು ಹೊರಗೆ ಬರುವ ನಿರೀಕ್ಷೆ ಇದೆ ಎಂದರು.

ಕದ್ರಿ ಪಾರ್ಕ್ ರಸ್ತೆಗೆ ಟೋಲ್‌ಗೆ ಆಕ್ಷೇಪ:

ನಗರದ ಕದ್ರಿ ಪಾರ್ಕ್ ರಸ್ತೆಯಲ್ಲಿ ಜನವರಿಯಿಂದ ವಾಹನಗಳಿಗೆ ಟೋಲ್ ವಿಧಿಸಲು ಚಿಂತನೆ ನಡೆಸಿರುವುದು ಗೊತ್ತಾಗಿದೆ. ಇಂತಹ ನಿರ್ಧಾರ ಸರಿಯಲ್ಲ. ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಇಲ್ಲಿನ ರಸ್ತೆಯ ನಿರ್ವಹಣೆಯ ಜವಾಬ್ದಾರಿಯನ್ನು ಪಾಲಿಕೆಗೆ ವಹಿಸಲಾಗಿತ್ತು. ಅನೇಕ ವರ್ಷಗಳಿಂದ ಮಹಿಳೆಯರು, ಹಿರಿಯರು, ಸೇರಿದಂತೆ ಸಾರ್ವಜನಿಕರು ತಮ್ಮ ವಾಹನಗಳಲ್ಲಿ ಬಂದು ಈ ಪಾರ್ಕ್‌ನಲ್ಲಿ ವಾಕಿಂಗ್ ಹೋಗುತ್ತಿದ್ದಾರೆ. ಪುಟ್ಟ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದಾರೆ. ಇದೀಗ ಇಂತಹ ಹೊಸ ನಿಯಮಗಳು ಜಾರಿಗೆ ಬಂದರೆ ಅವರೆಲ್ಲರಿಗೂ ತೊಂದರೆಯಾಗುತ್ತದೆ .ಕೂಡಲೇ ಇಂತಹ ಜನ ವಿರೋಧಿ ಅವೈಜ್ಞಾನಿಕ ನೀತಿಯನ್ನು ಕೈ ಬಿಡಬೇಕೆಂದು ಆಗ್ರಹಿಸಿದರು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ-ಖಾತಾಕ್ಕಾಗಿ ಜನಸಾಮಾನ್ಯರು ಅನುಭವಿಸುತ್ತಿರುವ ತೊಂದರೆ ಮುಂದುವರಿದಿದ್ದು ಇನ್ನೂ ಸಹ ಅದನ್ನು ಸರಿಪಡಿಸುವ ಗೋಜಿಗೆ ಹೋಗದ ರಾಜ್ಯ ಕಾಂಗ್ರೆಸರಕಾರದ ಬೇಜವಾಬ್ದಾರಿ ಖಂಡನೀಯ. ಕಳೆದ ಎರಡು ವರ್ಷಗಳಿಂದಲೂ ಇರುವ ಈ ಸಮಸ್ಯೆಯ ಬಗ್ಗೆ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದಿದ್ದೇನೆ, ಸಂಬಂಧಪಟ್ಟ ಸಚಿವರಿಗೂ ಮನವಿ ಮಾಡಿದ್ದೇನೆ. ಅದರೂ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ನಾಗರಿಕರಿಗೆ ತೊಂದರೆ ತಪ್ಪಿಲ್ಲ ಎಂದು ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಅನೇಕ ಪ್ರಕರಣಗಳು ನಡೆದಿದೆ. ಒಂದು ಕಾಲದಲ್ಲಿ ಇಡೀ ದೇಶಕ್ಕೆ ಸ್ವಚ್ಛತೆಗೆ ಬ್ರ್ಯಾಂಡ್ ಆಗಿದ್ದ ಮಂಗಳೂರಿನಲ್ಲೇ ಇಂದು ರಸ್ತೆಗಳ ಎಲ್ಲೆಡೆ ಕಸ ಬಿದ್ದಿದೆ. ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದರೂ ಅದನ್ನು ರಾಜ್ಯ ಸರಕರದ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ದೂರಿದರು.

ಯಕ್ಷಗಾನ ಕಲಾವಿದರ ಬಗ್ಗೆ ಕೀಳು ಹೇಳಿಕೆ ಖಂಡನೀಯ

ಯಕ್ಷಗಾನ ಕಲಾವಿದರ ಬಗ್ಗೆ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆಯವರ ಕ್ಷಮೆಯಾಚಿಸಬೇಕು. ಈ ಕೂಡಲೇ ರಾಜ್ಯ ಸರಕಾರ ಅವರನ್ನು ಆ ಸ್ಥಾನದಿಂದಲೇ ಕಿತ್ತೆಸೆಯಬೇಕು ಎಂದು ಆಗ್ರಹಿಸಿದರು.

ಕರಾವಳಿ ಕರ್ನಾಟಕದ ಗಂಡು ಕಲೆಯಾದ ಯಕ್ಷಗಾನವು ಇಲ್ಲಿನ ಜನರ ಭಕ್ತಿ ಭಾವದಿಂದ ಕೂಡಿದ ಸಂಸ್ಕೃತಿಯ ಭಾಗವಾಗಿದೆ. ಯಕ್ಷಗಾನ ಕಲಾವಿದರನ್ನು ಗೌರವಯುತವಾಗಿ ಕಾಣುವ ಸಮಾಜ ನಮ್ಮದು. ಅಂತಹ -ಪರಂಪರೆಗೆ ಎಡಪಂಥೀಯ ಬುದ್ದಿಜೀವಿಗಳು ಅವಮಾನ ಮಾಡುವ ಮೂಲಕ ಇಡೀ ಹಿಂದೂ ಸಮಾಜಕ್ಕೆ ನೋವಾಗಿದೆ ಎಂದು ವೇದವ್ಯಾಸ ಕಾಮತ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ ರಮೇಶ್ ಕಂಡೆತ್, ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News