×
Ad

ಮೂಡಬಿದ್ರೆ: ವರ್ಲ್ಡ್ ಯುನಿವರ್ಸಿಟಿ ಗೇಮ್ಸ್‌ನಲ್ಲಿ ಆಳ್ವಾಸ್ ನ ಭವಾನಿ ಯಾದವ್ ಗೆ ಕಂಚಿನ ಪದಕ

Update: 2023-08-10 14:54 IST

ಮೂಡಬಿದ್ರೆ: ಚೀನಾದ ಚೆಂಗ್ಡುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ (ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ -2021) ಲಾಂಗ್‌ ಜಂಪ್‌ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆಯ ಕ್ರೀಡಾಪಟು ಭವಾನಿ ಯಾದವ್ ಭಗವತಿ ಇತಿಹಾಸ ಬರೆದಿದ್ದಾರೆ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಭವಾನಿ ಯಾದವ್ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪ್ರತಿಷ್ಠಿತ ಕ್ರೀಡಾ ದತ್ತು ಯೋಜನೆಯ ಅಡಿಯಲ್ಲಿ ಆಳ್ವಾಸ್ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದು, ಮಂಗಳೂರು ವಿಶ್ವವಿದ್ಯಾಲಯ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ. ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದ ಕ್ರೀಡಾಪಟು ಪದಕ ಪಡೆದಿದ್ದಾರೆ. ಆ ಮೂಲಕ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಭಾರತಕ್ಕೆ ಪದಕ ತಂದುಕೊಟ್ಟ ಮೂರನೇ ಅಥ್ಲೀಟ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಅವರನ್ನು ಆಗಸ್ಟ್ 15 ರಂದು ಸ್ವಾತಂತ್ರ್ಯದ ದಿನ ಅಭಿನಂದಿಸಲಾಗುವುದು’ ಎಂದರು.

ಕಳೆದ ಜುಲೈನಲ್ಲಿ ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದ ಲಾಂಗ್‌ ಜಂಪ್‌ನಲ್ಲಿ 6.44 ಮೀಟರ್ ಸಾಧನೆಯೊಂದಿಗೆ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದರು.

ಚೀನಾದ ಚಾಂಗ್ಡುವಿನಲ್ಲಿ ಜುಲೈ 28ರಿಂದ ಆಗಸ್ಟ್ 8ರ ವರೆಗೆ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ- 2021ರಲ್ಲಿ (ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ -2021) ದೇಶದ 85 ಕ್ರೀಡಾಪಟುಗಳು ಪಾಲ್ಗೊಂಡಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆಯ 8 ಕ್ರೀಡಾಪಟುಗಳು ಪಾಲ್ಗೊಂಡಿದ್ದರು.

ಈ ಬಾರಿಯ ರಾಷ್ಟ್ರೀಯ ಅಂತರ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ 12 ಪದಕಗಳನ್ನು ಪಡೆದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹಾಗೂ ಕೋಚ್ ಅಜಿತ್ ಕುಮಾರ್ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News