ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

Update: 2024-05-08 14:37 GMT

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಮೇ 8ರಂದು ಬುಧವಾರ ಸಂಜೆ 4 ಗಂಟೆಯ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಕೇದೆ ಸುಬ್ಬ ಪೂಜಾರಿ - ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರು ಬಿಜೆಪಿ ಪಕ್ಷದಿಂದ 1983 ರಲ್ಲಿ ಮೊದಲ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1985 ಮತ್ತೆ ಬಿಜೆಪಿಯಿಂದ ಶಾಸಕರಾದ ಅವರು, 1994ರಲ್ಲಿ ಜನತಾದಳದಿಂದ ಶಾಸಕರಾಗಿ ಆಯ್ಕೆಯಾದರು. 2008 ಮತ್ತು 2013ರಲ್ಲಿ ಕಾಂಗ್ರೆಸ್‌ ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋತಿದ್ದರು. ಬಿಲ್ಲವ ಸಮುದಾಯಕ್ಕೆ ಸೇರಿದ ಅವರು ಜನಾನುರಾಗಿಯಾಗಿದ್ದರು. ಶಾಸಕ ಸ್ಥಾನ ಕಳೆದುಕೊಂಡ ಮೇಲೂ ರಾಜಕೀಯವಾಗಿ ಜಿಲ್ಲೆಯಲ್ಲಿ ತಮ್ಮ ಪ್ರಭಾವ ಉಳಿಸಿಕೊಂಡಿದ್ದರು. 

ಇತ್ತೀಚೆಗೆ ಅವರ ಆರೋಗ್ಯ ಹದಗೆಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬುಧವಾರ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನ ಹೊಂದಿದ್ದಾರೆ. ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News