×
Ad

ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

Update: 2025-02-25 18:11 IST

ಉಳ್ಳಾಲ: ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿನನ್ನು ಕನ್ಯಾನ ನಿವಾಸಿ ಬಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್ ( 69) ಎಂದು ಗುರುತಿಸಲಾಗಿದೆ. ಈತನನ್ನು ಫೆ. 24ರಂದು ಬೆಂಗಳೂರಿನ ರೈಲ್ವೇ ಸ್ಟೇಷನ್ ಬಳಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಶಶಿ ತೇವರ್ ತನಿಖೆ ವೇಳೆ ನೀಡಿದ ಮಾಹಿತಿ ಮೇರೆಗೆ ಕೆಸಿರೋಡ್ ನಿವಾಸಿ ನಝೀರ್ ಎಂಬಾತನನ್ನು ಪೊಲೀಸರು ಫೆ.25 ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿ ಶಶಿ ತೇವರ್ ನಝೀರ್ ಜೊತೆ ಸಂಪರ್ಕದಲ್ಲಿ ಇದ್ದ. ಈತ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ದರೋಡೆ ಕೃತ್ಯವೆಸಗಲು ಸುಮಾರು 6 ತಿಂಗಳಿನಿಂದ ಇತರ ಆರೋಪಿಗಳೊಂದಿಗೆ ಸೇರಿ ಸಂಚು ರೂಪಿಸಿ ಕೃತ್ಯವೆಸಗಿದ್ದಾನೆ ಎಂದು ತನಿಖೆ ವೇಳೆ ತಿಳಿದು ಬಂದಿದೆ.

ನಝೀರ್ ಎಂಬಾತ ಭಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್ ಜೊತೆ ದರೋಡೆ ಪ್ರಕರಣದಲ್ಲಿ ಶಾಮೀಲಾಗಿದ್ದು, ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡವನ್ನು ಆರೋಪಿಗಳಿಗೆ ತೋರಿಸಿಕೊಟ್ಟು ಡಕಾಯತಿ ನಡೆಸಬೇಕಾದ ದಿನ, ವೇಳೆ ಹಾಗೂ ಸೊಸೈಟಿಯಲ್ಲಿರುವ ಸಿಬ್ಬಂದಿಗಳ ಬಗ್ಗೆ ಮತ್ತು ಕೃತ್ಯದ ನಂತರ ತಪ್ಪಿಸಿಕೊಂಡು ಹೋಗುವ ಮಾರ್ಗ ಮುಂತಾದ ಮಾಹಿತಿಯನ್ನು ನಝೀರ್ ಆರೋಪಿಗಳಿಗೆ ನೀಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜ.17 ರಂದು ಕೋಟೆಕಾರ್ ಸಹಕಾರಿ ಬ್ಯಾಂಕ್ ನಲ್ಲಿ ದರೋಡೆ ಪ್ರಕರಣ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News