×
Ad

ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರ-ವಂಚನೆ ಪ್ರಕರಣ: ಮಗು, ಸಂತ್ರಸ್ತೆ, ಆರೋಪಿಯ ಡಿಎನ್ಎ ಪರೀಕ್ಷೆ

Update: 2025-08-20 10:31 IST

ಶ್ರೀಕೃಷ್ಣ ಜೆ. ರಾವ್

ಪುತ್ತೂರು: ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ನಿಂದ ಅತ್ಯಾಚಾರ, ವಂಚನೆಗೆ ಒಳಗಾದ ಸಹಪಾಠಿ ವಿದ್ಯಾರ್ಥಿನಿ ಜನ್ಮ ನೀಡಿರುವ ಮಗುವಿನ ಡಿಎನ್ ಎ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ.

ಮಂಗಳವಾರ ಪುತ್ತೂರಿನ ನ್ಯಾಯಾಲಯದಲ್ಲಿ ಡಿಎನ್ಎ ಪರೀಕ್ಷೆಗೆ ಸಂತ್ರಸ್ತೆ, ಮಗು ಹಾಗೂ ಆರೋಪಿಯ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಶ್ರೀಕೃಷ್ಣನನ್ನು ಪೊಲೀಸರು ಮಂಗಳವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ಸಂತ್ರಸ್ತೆ, ಆಕೆಯ ಮಗು ಮತ್ತು ಸಂತ್ರಸ್ತೆಯ ತಾಯಿ ಹಾಜರಿದ್ದರು.

ನ್ಯಾಯಾಧೀಶರ ಸಮ್ಮುಖದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯರ ನೇತೃತ್ವದಲ್ಲಿ ವಿಧಿವಿಜ್ಞಾನ ಇಲಾಖೆಯ ಸಿಬ್ಬಂದಿ ಮೂವರ ರಕ್ತದ ಮಾದರಿಗಳನ್ನು ಸಂಗ್ರಹಿಸಿದರು. ಅವುಗಳನ್ನು ಡಿಎನ್ಎ ಪರೀಕ್ಷೆಗಾಗಿ ಬೆಂಗಳೂರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮಹಿಳಾ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಬಸ್ಸಿನಲ್ಲಿ ರಕ್ತದ ಮಾದರಿಯನ್ನು ಬೆಂಗಳೂರಿಗೆ ಕೊಂಡೊಯ್ದರು. ಈ ವೇಳೆ ಸಂತ್ರಸ್ತೆಯ ತಾಯಿಯೂ ಪೊಲೀಸ್ ಸಿಬ್ಬಂದಿಯೊಂದಿಗೆ ಬೆಂಗಳೂರಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಒಂದು ವಾರದಲ್ಲಿ ಎಫ್ಎಸ್ಎಲ್ ವರದಿ ಬರುವ ಸಾಧ್ಯತೆ ಇದೆ. ಈ ಪ್ರಕರಣಕ್ಕೆ ಸಂಬಂಧಿಸಿದ ದೋಷಾರೋಪಣ ಪಟ್ಟಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವುದಾಗಿ ತಿಳಿದು ಬಂದಿದೆ

ಏನಿದು ಪ್ರಕರಣ?

ಪುತ್ತೂರಿನ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಎಂಬವರ ಪುತ್ರ ಶ್ರೀಕೃಷ್ಣ ಜೆ. ರಾವ್ ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ವಿವಾಹದ ಆಮಿಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಈ ಮಧ್ಯೆ ಜೂ.27ರಂದು ಸಂತ್ರಸ್ತೆ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಇದೀಗ ಪಿತೃತ್ವ ಪತ್ತೆಗಾಗಿ ಡಿಎನ್ಎ ಪರೀಕ್ಷೆಗೆ ಪೊಲೀಸರು ಮುಂದಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News