Davangere : ಚಿಗಟೇರಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸೆ ಕೊಠಡಿಯಲ್ಲಿ ಸ್ಫೋಟ; ತಪ್ಪಿದ ಭಾರಿ ಅನಾಹುತ
ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸೆ ಕೊಠಡಿಯಲ್ಲಿದ್ದ ಅನೆಸ್ತೇಶಿಯಾ ವರ್ಕ್‌ಸ್ಟೇಷನ್‌ನಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ನಡೆದಿದೆ.
ಆಸ್ಪತ್ರೆಯ ಆಪರೇಷನ್ ಥಿಯೇಟರ್–5 ಮತ್ತು 6ರ ಕಣ್ಣಿನ ಶಸ್ತ್ರಚಿಕಿತ್ಸೆ ವಿಭಾಗದಲ್ಲಿ ರೋಗಿಯೊಬ್ಬರ ಶಸ್ತ್ರಚಿಕಿತ್ಸೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಅನೆಸ್ತೇಶಿಯಾ ವರ್ಕ್‌ಸ್ಟೇಷನ್‌ನಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆ ನಡೆದ ಸಂದರ್ಭದಲ್ಲಿ 10ಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯದಲ್ಲಿದ್ದು, ಸಿಬ್ಬಂದಿಯ ಸಮಯೋಚಿತ ಕ್ರಮದಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಸ್ಫೋಟದ ಪರಿಣಾಮ ಆಪರೇಷನ್ ಥಿಯೇಟರ್‌ನಲ್ಲಿದ್ದ ಅನೆಸ್ತೇಶಿಯಾ ಯಂತ್ರ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳು ಬೆಂಕಿಗಾಹುತಿಯಾಗಿವೆ. ಬಳಿಕ ಆಸ್ಪತ್ರೆ ಸಿಬ್ಬಂದಿ ಹಾಗೂ ಸಂಬಂಧಿತ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತಾಂತ್ರಿಕ ದೋಷವೇ ಅಥವಾ ಇತರ ಕಾರಣಗಳಿಂದ ಘಟನೆ ಸಂಭವಿಸಿತೇ ಎಂಬ ಕುರಿತು ತನಿಖೆ ನಡೆಯುತ್ತಿದೆ.
ಆಸ್ಪತ್ರೆ ಆಡಳಿತವು ಘಟನೆಯ ಕುರಿತು ಪರಿಶೀಲನೆ ಆರಂಭಿಸಿದ್ದು, ಹಾನಿಯ ಪ್ರಮಾಣ ಹಾಗೂ ಕಾರಣಗಳ ಬಗ್ಗೆ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.