ದಾವಣಗೆರೆ: ಆಸ್ತಿ ಪಾಲು ವಿಭಾಗದ ವೈಷಮ್ಯದಿಂದ ಮಲತಾಯಿ ಮಗನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 25,000 ದಂಡ ವಿಧಿಸಿ ತೀರ್ಪು ನೀಡಿದೆ.

ಹರಿಹರ ನಗರದ ನಿವಾಸಿಗಳಾದ ರಾಜು ಕೆ. (25) ಮತ್ತು ಮಾರುತಿ ಜಿ.ಕೆ ಶಿಕ್ಷೆಗೊಳಗಾದ ಅಪರಾಧಿಗಳು.

ಪ್ರಕರಣದ ಹಿನ್ನೆಲೆ: ಹರಿಹರ ನಗರದ ಗುಡ್ಡಪ್ಪ ಎಂಬುವವರಿಗೆ ಇಬ್ಬರು ಪತ್ನಿಯರಿದ್ದು, ಮೊದಲ ಪತ್ನಿಯ ಪುತ್ರ ಕುಮಾರ ಕೆ.ಜಿ ಹಾಗೂ ಎರಡನೇ ಪತ್ನಿಯ ಪುತ್ರರಾದ ರಾಜು ಮತ್ತು ಮಾರುತಿ ನಡುವೆ ಆಸ್ತಿ ಹಂಚಿಕೆ ವಿಚಾರವಾಗಿ ಮನಸ್ತಾಪವಿತ್ತು. ಇದೇ ದ್ವೇಷದಿಂದ 2023ರ ಮೇ 14ರಂದು ಆರೋಪಿಗಳಿಬ್ಬರೂ ಕುಮಾರನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. ಈ ಕುರಿತು ಮೃತರ ಪತ್ನಿ ಲಕ್ಷ್ಮಿ ಎಸ್. ಅಲಿಯಾಸ್ ರೇಖಾ ಹರಿಹರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ಪೊಲೀಸ್ ನಿರೀಕ್ಷಕ ಎಸ್. ದೇವಾನಂದ್ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಗುರುರಾಜ್ ಸೋಮಕ್ಕಲವರ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನವೆಂಬರ್ 25ರಂದು ಈ ತೀರ್ಪು ಪ್ರಕಟಿಸಿದ್ದಾರೆ. ದಂಡದ ಮೊತ್ತದಲ್ಲಿ 15,000ವನ್ನು ಸಂತ್ರಸ್ತ ಕುಟುಂಬಕ್ಕೆ ಹಾಗೂ ಉಳಿದ 10,000ವನ್ನು ಸರ್ಕಾರಕ್ಕೆ ಜಮಾ ಮಾಡುವಂತೆ ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಸತೀಶ್ ಕೆ. ವಾದ ಮಂಡಿಸಿದ್ದರು. ತನಿಖಾಧಿಕಾರಿ, ಸಿಬ್ಬಂದಿ ಹಾಗೂ ಸರ್ಕಾರಿ ವಕೀಲರ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಎಚ್.ಟಿ. ಶ್ಲಾಘಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪ್ರಕಾಶ್ ದಾವಣಗೆರೆ

contributor