×
Ad

ಹುಬ್ಬಳ್ಳಿ ಹೆದ್ದಾರಿಯಲ್ಲಿ ಯುವಕನ ಮೃತದೇಹ ಪತ್ತೆ; ಕೊಲೆ ಮಾಡಿ ಚೀಲದಲ್ಲಿ ತುಂಬಿ ಎಸೆದಿರುವ ಶಂಕೆ

Update: 2026-02-25 12:23 IST

ಹುಬ್ಬಳ್ಳಿ: ನಗರದ ಹೊರವಲಯದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಗದಗ ರಸ್ತೆಯಲ್ಲಿರುವ ITC ಗೋಡೌನ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಯುವಕನ ಮೃತದೇಹ ಪತ್ತೆಯಾಗಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ.

ಮೃತ ಯುವಕನನ್ನು ಬಂಡಿವಾಡ ಮೂಲದ ಮಂಜುನಾಥ (29) ಎಂದು ಗುರುತಿಸಲಾಗಿದೆ. ಬುಧವಾರ ಮುಂಜಾನೆ ರಸ್ತೆ ಮೂಲಕ ತೆರಳುತ್ತಿದ್ದವರು ಅನುಮಾನಾಸ್ಪದ ಚೀಲವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಘಟನೆ ಬಯಲಾಗಿದೆ.

ದುಷ್ಕರ್ಮಿಗಳು ಯುವಕನನ್ನು ಅಮಾನವೀಯವಾಗಿ ಕೊಲೆ ಮಾಡಿ, ಮೃತದೇಹವನ್ನು ಚೀಲದಲ್ಲಿ ತುಂಬಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಕೊಲೆಗೆ ನಿಖರ ಕಾರಣವೇನು, ಹಂತಕರು ಯಾರು ಎಂಬುದು ಇನ್ನೂ ನಿಗೂಢವಾಗಿದೆ. ಹಳೆಯ ದ್ವೇಷ ಅಥವಾ ವೈಯಕ್ತಿಕ ವೈಮನಸ್ಸಿನ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ನಡುರಸ್ತೆಯಲ್ಲೇ ಮೃತದೇಹ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News