ರಾಜ್ಯದಲ್ಲಿ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ : ಸಿಎಂ ಸಿದ್ದರಾಮಯ್ಯ
Update: 2024-12-08 20:53 IST
ಹುಬ್ಬಳ್ಳಿ : "ರಾಜ್ಯದಲ್ಲಿ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ಬಿಜೆಪಿಯವರು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ" ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರವಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಒಂದು ಕಡೆ ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತಾರೆ. ಆದರೆ, ಇವರು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ವಿರೋಧ ಮಾಡುತ್ತಾರೆ. ಇದು ಇಬ್ಬಗೆತನ ಅಲ್ಲವೇ? ಬಿಜೆಪಿಯವರಿಗೆ ಸ್ಪಷ್ಟವಾದ ನಿಲುವು ಇಲ್ಲ" ಎಂದು ಹೇಳಿದರು.
ಬಳ್ಳಾರಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ʼಬಳ್ಳಾರಿ ಘಟನೆಗೆ ಸಂಬಂಧಿಸಿ ನಾವು ಈಗಾಗಲೇ ಪರಿಶೀಲನಾ ತಂಡ ರಚಿಸಿದ್ದೇವೆ. ಅದು ವರದಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮೃತ ಬಾಣಂತಿಯರಿಗೆ ತಲಾ 5 ಲಕ್ಷ ಪರಿಹಾರ ನೀಡುವಂತೆಯೂ ಅದೇಶಿಸಲಾಗಿದೆʼ ಎಂದು ತಿಳಿಸಿದರು.