×
Ad

ಕಾಂಗ್ರೆಸ್ ಸರಕಾರ ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದೇ ಇರುವುದು ಅಕ್ಷಮ್ಯ ಅಪರಾಧ : ಬಿ.ವೈ.ವಿಜಯೇಂದ್ರ

Update: 2025-11-25 15:21 IST

ದಾವಣಗೆರೆ : ರೈತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಇವತ್ತು ಹೋರಾಟಕ್ಕೆ ಚಾಲನೆ ನೀಡಿದ್ದೇವೆ. ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದೇ ಇರುವುದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಮಂಗಳವಾರ ಪ್ರತಿಭಟನೆಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ನಡಹಳ್ಳಿ, ರಾಜ್ಯದ ಹಿರಿಯ ನಾಯಕ ಸಿ.ಟಿ.ರವಿ, ಮುಖಂಡರಾದ ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ ಸೇರಿ ಜಿಲ್ಲೆಯ ನಾಯಕರು ಒಟ್ಟಾಗಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ರಾಜ್ಯದಲ್ಲಿರುವ ರೈತವಿರೋಧಿ ಕಾಂಗ್ರೆಸ್ ಸರಕಾರವು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥವಾಗಿಲ್ಲ ಎಂದು ಟೀಕಿಸಿದರು.

ಮೆಕ್ಕೆ ಜೋಳದ ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಲಕ್ಷ್ಮೇಶ್ವರದಲ್ಲಿ ಹೋರಾಟ ನಡೆಯುತ್ತಿದೆ. ನವಲಗುಂದದಲ್ಲಿ ರೈತ ಮುಖಂಡ ಶಂಕ್ರಣ್ಣ ಅಂಬಳಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಬಾಗಲಕೋಟೆ, ಶಿವಮೊಗ್ಗ ಸೇರಿ ಅನೇಕ ಜಿಲ್ಲೆಗಳಲ್ಲಿ ಹೋರಾಟ ನಡೆಯುತ್ತಿದೆ. ಕೇಂದ್ರವು ಬೆಂಬಲ ಬೆಲೆ ಘೋಷಿಸಿದ್ದರೂ ರಾಜ್ಯ ಸರಕಾರವು ಖರೀದಿ ಕೇಂದ್ರ ತೆರೆದಿಲ್ಲ ಎಂದು ಆಕ್ಷೇಪಿಸಿದರು.

ಮುಖ್ಯಮಂತ್ರಿಗಳು ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು. ತುಂಗಭದ್ರಾ ಅಣೆಕಟ್ಟಿಗೆ 32 ಕ್ರಸ್ಟ್ ಗೇಟ್ ಅಳವಡಿಸದೇ ಕೊಪ್ಪಳ, ಬಳ್ಳಾರಿ, ವಿಜಯನಗರ, ರಾಯಚೂರು ಸುತ್ತಲಿನ ರೈತರು ಎರಡನೇ ಬೆಳೆ ಬೆಳೆಯಲು ಆಗುತ್ತಿಲ್ಲ. ರೈತರಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ಕೊಡಬೇಕೆಂದು ಅವರು ಒತ್ತಾಯಿಸಿದರು.

ರಾಜ್ಯದ ರೈತರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸದೇ ಇಡೀ ಸಚಿವಸಂಪುಟವು ದೆಹಲಿಯಲ್ಲಿ ಕುಳಿತಿದೆ. ಮುಖ್ಯಮಂತ್ರಿಗಳು ಮೆಕ್ಕೆಜೋಳ ಖರೀದಿ ಕೇಂದ್ರದ ಕುರಿತು ಚರ್ಚಿಸಲು ಸಭೆ ಕರೆದರೆ ಕೃಷಿ ಸಚಿವರು ದೆಹಲಿಯಲ್ಲಿದ್ದರು ಎಂದು ಟೀಕಿಸಿದರು.

ಮುಖ್ಯಮಂತ್ರಿ ಯಾರೆಂಬುದು ನಮಗೆ ಸಂಬಂಧವಿಲ್ಲ. ರೈತರ ಸಮಸ್ಯೆಗೆ ತಕ್ಷಣ ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ನ.27, 28ರಂದು ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಹೋರಾಟಕ್ಕೆ ಕರೆ ನೀಡಲಾಗಿದೆ. ಡಿ.1 ಮತ್ತು 2ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಬಿಜೆಪಿ ರೈತ ಮೋರ್ಚಾ ಹೋರಾಟ ಮಾಡಲಿದೆ ಎಂದು ತಿಳಿಸಿದರು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News