ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಿದ್ಯಾನಗರ ಹಾಗೂ ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಮತದಾರರ ಹಕ್ಕುಗಳ ರಕ್ಷಣೆಗಾಗಿ ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಸಲಾಯಿತು. ನಗರದ ಅಂಬೇಡ್ಕರ್ ವೃತ್ತದಿಂದ ಕೊಪ್ಪಿಕರ್ ರಸ್ತೆಯವರೆಗೆ ಪಾದಯಾತ್ರೆ ನಡೆಯಿತು.
ಚುನಾವಣಾ ಆಯೋಗವು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ವೇಳೆ ಬಿಜೆಪಿ, ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೊಪ್ಪಿಕರ್ ರಸ್ತೆಯಲ್ಲಿ ಪಾದಯಾತ್ರೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಬಳಿಕ ಅವರನ್ನು ಆರ್ ಗ್ರೌಂಡ್‌ಗೆ ಕರೆದೊಯ್ದು ಬಿಡುಗಡೆ ಮಾಡಿದರು.
ಪಾದಯಾತ್ರೆಯಲ್ಲಿ ಕಾಂಗ್ರೆಸ್ ಮಹಾನಗರ ಘಟಕದ ಅಧ್ಯಕ್ಷ ಸದಾನಂದ ಡಂಗನವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ, ಮಾಜಿ ಸಂಸದ ಐ.ಜಿ. ಸನದಿ, ಶಹಜಾನ್ ಮುಜಾವರ, ಸುವರ್ಣ ಕಲ್ಕುಂಟ್ಲಾ, ಸಂದೀಪ್ ಕುಮಾರ್, ಮೊಹಮ್ಮದ್ ಷರೀಫ್ ಗರ್ಗದ ಸೇರಿದಂತೆ ಕೆಪಿಸಿಸಿ (KPCC), ಡಿಸಿಸಿ (DCC) ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಮುಂಚೂಣಿ ಘಟಕಗಳು, ಸೆಲ್‌ಗಳು ಮತ್ತು ಇಲಾಖೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಮಹಾನಗರ ಪಾಲಿಕೆ ಸದಸ್ಯರು, ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರು, ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.