×
Ad

Hubballi | ಕಟೌಟ್ ಬಿದ್ದು ಮೂವರಿಗೆ ಗಾಯ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ

Update: 2026-01-24 20:40 IST

ಹುಬ್ಬಳ್ಳಿ: ವಸತಿ ಇಲಾಖೆ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಆಯೋಜಿಸಿದ್ದ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ಕಟೌಟ್ ಬಿದ್ದು, ಮೂರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ.

ಘಟನೆಯಲ್ಲಿ ಬ್ಯಾಹಟ್ಟಿಯ ಶಂಕರ ಹಡಪದ (28), ಹುಬ್ಬಳ್ಳಿಯ ಶಾಂತಾ ಕ್ಯಾರಕಟ್ಟಿ ( 60) ಮತ್ತು ಧಾರವಾಡದ ಲಕ್ಷ್ಮಿನಗರದ ಮಂಜುನಾಥ (33) ಎಂಬವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಲಾಗಿದೆ.

ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಕಟೌಟ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಟೌಟ್ ಬಿದ್ದು ಮೂವರು ಜನ ಗಾಯಗೊಂಡಿದ್ದು, ನಗರದ ಸುಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಸತಿ ರಹಿತರಿಗೆ ನೂತನ ಮನೆಗಳ ವಿತರಣೆ ಕಾರ್ಯಕ್ರಮದ ನಂತರ, ಸುಚಿರಾಯು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಈ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿದ ಸಿದ್ದರಾಮಯ್ಯ ಅವರು, ಗಾಯಾಳುಗಳು ಸಂಪೂರ್ಣ ಗುಣಮುಖರಾಗುವವರೆಗೆ ಸರಕಾರದಿಂದಲೇ ಉಚಿತವಾಗಿ ಅಗತ್ಯವಾದ ಚಿಕಿತ್ಸೆ, ಔಷಧಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ವಸತಿ ಸಚಿವ ಝಮೀರ ಅಹ್ಮದ್ ಖಾನ್, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಪರಿಷತ್ ಮುಖ್ಯ ಸಚೇಕರಾದ ಸಲೀಂ ಅಹ್ಮದ್, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ, ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ.ಹೊನಕೇರಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News