ಪ್ರಜಾಪ್ರಭುತ್ವದ ಹೆಸರಿನಲ್ಲಿ ಸರ್ವಾಧಿಕಾರ ಆಡಳಿತ: ಬಸವರಾಜ ಸೂಳಿಭಾವಿ
ಧಾರವಾಡ : ಜನಪರ ಒಕ್ಕೂಟಗಳ ನೇತೃತ್ವದಲ್ಲಿ ಎಸ್ಐಆರ್ ವಿರೋಧಿ ಪ್ರತಿಭಟನೆ
ಧಾರವಾಡ: ದೇಶದಲ್ಲಿ ಪ್ರಜಾಪ್ರಭುತ್ವದ ಹೆಸರಿನಲ್ಲಿ ಸರ್ವಾಧಿಕಾರ ಆಡಳಿತ ನಡೆಯುತ್ತಿದ್ದು, ಜನರ ಅಭಿಪ್ರಾಯಕ್ಕೆ ಸರಕಾರ ಮನ್ನಣೆ ನೀಡುತ್ತಿಲ್ಲ ಎಂದು ಸಾಹಿತಿ ಬಸವರಾಜ ಸೂಳಿಭಾವಿ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಜನಪರ ಒಕ್ಕೂಟಗಳ ನೇತೃತ್ವದಲ್ಲಿ ಎಸ್ಐಆರ್ (ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ) ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡುತ್ತಿದ್ದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ತನ್ನ ಅಭಿಪ್ರಾಯ ವ್ಯಕ್ತಪಡಿಸುವ ಹಾಗೂ ಅನ್ಯಾಯದ ವಿರುದ್ಧ ಪ್ರತಿಭಟಿಸುವ ಹಕ್ಕಿದೆ. ಈ ಹಕ್ಕನ್ನು ಸಂವಿಧಾನವೇ ನೀಡಿದೆ. ಆದರೆ, ಪ್ರಜಾಪ್ರಭುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಸರಕಾರ ಜನರ ಸಂವಿಧಾನಬದ್ಧ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ದೂರಿದರು.
ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ. ಕೇಂದ್ರ ಸರಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಡೆಗಣಿಸಿ ಸರ್ವಾಧಿಕಾರಿ ಧೋರಣೆಯಿಂದ ನಡೆದುಕೊಳ್ಳುತ್ತಿದೆ. ಜನರು ಏಕೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಳ್ಳುವ ಬದಲು, ಅವರ ಹೋರಾಟವನ್ನು ಬಲಪ್ರಯೋಗದ ಮೂಲಕ ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ ಎಂದು ಟೀಕಿಸಿದರು.
ಪ್ರತಿಭಟನಾಕಾರರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು, ಹೋರಾಟವನ್ನು ಆರಂಭದಲ್ಲೇ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ದಿಲ್ಲಿಯಲ್ಲಿ ಪ್ರತಿಭಟನೆಗಳನ್ನು ನಿಯಂತ್ರಿಸಲು ಪೊಲೀಸ್ ಬಲವನ್ನು ಬಳಸುತ್ತಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ. ಇಂತಹ ಬೆಳವಣಿಗೆಗಳು ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸರ್ವಾಧಿಕಾರದತ್ತ ಸಾಗುತ್ತಿರುವುದಕ್ಕೆ ಸಾಕ್ಷಿಯಾಗಿವೆ ಎಂದು ಹೇಳಿದರು.
ಯುವಜನರಲ್ಲಿ ಜಾಗೃತಿ ಮೂಡಿದೆ
ದೇಶದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಯುವಜನರು ಹೆಚ್ಚು ಪ್ರಜ್ಞಾಪೂರ್ವಕವಾಗಿ ಯೋಚಿಸುತ್ತಿದ್ದಾರೆ. ಸರಕಾರದ ನೀತಿಗಳು, ಪ್ರಜಾಪ್ರಭುತ್ವದ ಹಕ್ಕುಗಳ ಮೇಲಿನ ನಿರ್ಬಂಧಗಳು ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಬೆಳವಣಿಗೆಗಳನ್ನು ಯುವಜನರು ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿಯೇ ಅನ್ಯಾಯ, ದಬ್ಬಾಳಿಕೆ ಮತ್ತು ಸರ್ವಾಧಿಕಾರಿ ಧೋರಣೆಯ ವಿರುದ್ಧ ಯುವಜನರು ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದರು.
ಯುವಜನರು ನಡೆಸುತ್ತಿರುವ ಹೋರಾಟಕ್ಕೆ ಸಮಾಜದ ಎಲ್ಲ ವರ್ಗದ ಜನರು ಬೆಂಬಲ ನೀಡಬೇಕು. ಯುವಜನರು ಮಾತ್ರವಲ್ಲದೆ, ಪ್ರತಿಯೊಬ್ಬರೂ ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಗಂಭೀರವಾಗಿ ಚಿಂತಿಸಬೇಕು. ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಗಳಿಸಿದ ನಾವು, ದೇಶದಲ್ಲಿ ಸ್ಥಾಪಿತವಾಗಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿಯನ್ನೂ ಹೊರಬೇಕು ಎಂದು ಹೇಳಿದರು.
ಯಾರೋ ಹೇಳಿದಂತೆ ಬದುಕುವ ಬದಲು ಸ್ವತಂತ್ರವಾಗಿ ಬದುಕುವ ಮನೋಭಾವ ಬೆಳೆಸಿಕೊಳ್ಳಬೇಕು. ಗುಲಾಮಗಿರಿಯ ಮನಸ್ಥಿತಿಗೆ ಒಳಗಾಗದೆ, ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಯುವಜನರು ನಡೆಸುತ್ತಿರುವ ಹೋರಾಟಕ್ಕೆ ಜನರು ಕೈಜೋಡಿಸಬೇಕು ಎಂದು ಬಸವರಾಜ ಸೂಳಿಭಾವಿ ಕರೆ ನೀಡಿದರು.
ಪ್ರತಿಭಟನೆಯಲ್ಲಿ ಸಿಐಟಿಯುನ ಮಹೇಶ ಪತ್ತಾರ, ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಬಿ,ಎಸ್. ಸೊಪ್ಪಿನ, ಎಚ್.ಜಿ. ದೇಸಾಯಿ, ಬಿ.ಐ. ಇಳಗೇರ, ಬಿ.ಎನ್. ಪೂಜಾರಿ ಸೇರಿದಂತೆ ಮತ್ತಿತರರಿದ್ದರು.