×
Ad

ಧಾರವಾಡ: ಸಿಮೆಂಟ್ ಕಂಪನಿಯಲ್ಲಿ ಗೋಡೆ ಕುಸಿತ; ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯ

Update: 2026-07-10 08:12 IST

ಧಾರವಾಡ: ಇಲ್ಲಿನ ಕೈಗಾರಿಕಾ ಪ್ರದೇಶದ ಸಮೀಪ ಇರುವ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿಯ ಆವರಣದ ಗೋಡೆಯೊಂದು ದಿಢೀರ್ ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡು, ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.

ಅಪಘಾತ ಸಂಭವಿಸಿದ ವೇಳೆ ಕಂಪನಿಯಲ್ಲಿ ಒಟ್ಟು 14 ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಏಕಾಏಕಿ ಗೋಡೆ ಕುಸಿದು ಬಿದ್ದ ಪರಿಣಾಮ ಬಿಹಾರ ಮೂಲದ ಕಾರ್ಮಿಕರಾದ ರಾಜು ಮಾತುರ್ ಹಾಗೂ ರಮೇಶ್ ಅವರಿಗೆ ತೀವ್ರ ಗಾಯಗಳಾಗಿದ್ದು, ಉಳಿದ ಕಾರ್ಮಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಸಹೋದ್ಯೋಗಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಕಾರ್ಮಿಕರಿಗೆ ತುರ್ತು ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಘಟನೆ ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಗೋಡೆ ಕುಸಿತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News