Dharwad | ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
Update: 2025-11-21 19:44 IST
ಧಾರವಾಡ : ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಚಿಕ್ಕಮಲ್ಲಿಗವಾಡ ಗ್ರಾಮದ ನಾರಾಯಣ ಶಿಂಧೆ (42), ಈತನ ತಂದೆ ವಿಠ್ಠಲ ಶಿಂಧೆ (80) ಹಾಗೂ ನಾರಾಯಣನ ಮಕ್ಕಳಾದ ಶಿವಕುಮಾರ ಶಿಂಧೆ (12) ಹಾಗೂ ಶ್ರೀನಿಧಿ ಶಿಂಧೆ (11) ಎಂಬುವವರು ಅದೇ ಗ್ರಾಮದ ದೇವಾಲಯವೊಂದರ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ದನ ಕಾಯುವವರು ನೋಡಿದಾಗ ವಿಷಯ ಬೆಳಕಿಗೆ ಬಂದಿದೆ. ನಾರಾಯಣ ತನ್ನ ಎರಡೂ ಮಕ್ಕಳು ಹಾಗೂ ತಂದೆಯೊಂದಿಗೆ ಬಾವಿಗೆ ಹಾರಿದ್ದಾರೆ ಎನ್ನಲಾಗಿದೆ.
ಸದ್ಯ ನಾಲ್ಕೂ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.