ಮಹಿಳೆಯರಿಗೆ ಸುರಕ್ಷಿತ ಹಾಗೂ ಗೌರವಯುತ ವಾತಾವರಣ ಸೀಗಬೇಕು : ಡಾ.ನಾಗಲಕ್ಷ್ಮಿ ಚೌಧರಿ
ಧಾರವಾಡ : ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ಮತ್ತು ಗೌರವಯುತ ವಾತಾವರಣ ನಿರ್ಮಾಣವಾಗಬೇಕು. ಮಹಿಳೆಯರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯದಿಂದ ಇದ್ದಾಗ ಮಾತ್ರ ಆತ್ಮಸ್ಥೈರ್ಯದಿಂದ ತಮ್ಮ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ.
ಸೋಮವಾರ ಧಾರವಾಡ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಕರ್ತವ್ಯದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ದೌರ್ಜನ್ಯ ( ನಿರ್ಬಂಧನೆ ಹಾಗೂ ನಿವಾರಣೆ) ಅಧಿನಿಯಮ 2013 ರ ತರಬೇತಿ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ನಿಟ್ಟಿನಲ್ಲಿ ಸಹದ್ಯೋಗಿಗಳ ಮತ್ತು ಸಾರ್ವಜನಿಕರ ಸಹಕಾರ ಮುಖ್ಯವಾಗಿದ್ದು, ಇಲಾಖೆಯ ಅಧಿಕಾರಿಗಳು ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಹಾಗೂ ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಂದು ಸಂಸ್ಥೆಯಲ್ಲೂ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಸೂಚಿಸಿದರು.
ಮಹಿಳೆಯರ ದೂರುಗಳನ್ನು ಗೌಪ್ಯವಾಗಿ ಸ್ವೀಕರಿಸಲು ಶೀ ಬಾಕ್ಸ್ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಮಹಿಳೆಯರು ತಮ್ಮ ಮೇಲೆ ನಡೆಯುವ ಯಾವುದೇ ರೀತಿಯ ಅನ್ಯಾಯ, ಕಿರುಕುಳ ಅಥವಾ ದೌರ್ಜನ್ಯಗಳನ್ನು ಮೌನವಾಗಿ ಸಹಿಸಿಕೊಳ್ಳದೆ, ಧೈರ್ಯವಾಗಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಜೊತೆಗೆ ಘಟನೆಗಳ ಬಗ್ಗೆ ದೂರು ದಾಖಲಿಸಲು ಮುಂದಾಗಬೇಕು ಎಂದು ನಾಗಲಕ್ಷ್ಮಿ ಚೌಧರಿ ಹೇಳಿದರು.
ಸಮಾಜದಲ್ಲಿ ಮಹಿಳೆಯರ ಗೌರವ ಮತ್ತು ಸುರಕ್ಷತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮಹಿಳೆಯರಿಗೆ ಸುರಕ್ಷಿತ ಕೆಲಸದ ವಾತಾವರಣ ಒದಗಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಧಾರವಾಡ ಜಿಲ್ಲೆಯಲ್ಲಿ ಪೊಲೀಸರು ಮಹಿಳಾ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದು ತಿಳಿದು ಬಹಳ ಸಂತೋಷವಾಗಿದೆ ಎಂದು ಅವರು ತಿಳಿಸಿದರು.
ಮಹಿಳೆಯರ ಸುರಕ್ಷತೆ, ಗೌರವ ಮತ್ತು ನ್ಯಾಯಕ್ಕಾಗಿ ಪೊಲೀಸರು ಕೈಗೊಳ್ಳುತ್ತಿರುವ ಕ್ರಮಗಳು ಸಮಾಜದಲ್ಲಿ ವಿಶ್ವಾಸ ಮೂಡಿಸುತ್ತಿವೆ. ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ, ಅವರೊಂದಿಗೆ ಆತ್ಮೀಯವಾಗಿ ನಡೆದುಕೊಳ್ಳುತ್ತಿರುವ ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ನಾಗಲಕ್ಷ್ಮಿ ಚೌಧರಿ ಹೇಳಿದರು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾತನಾಡಿ, ಯಾವುದೇ ಸರಕಾರಿ, ಖಾಸಗಿ ಕಚೇರಿಗಳು ಮತ್ತು ಕೈಗಾರಿಕೆಗಳಲ್ಲಿ ಹತ್ತು ಮತ್ತು ಹತ್ತಕ್ಕಿಂತ ಹೆಚ್ಚು ದುಡಿಯುವ ಮಹಿಳೆಯರು ಇದ್ದಲ್ಲಿ ಕಡ್ಡಾಯವಾಗಿ ‘ಶೀ ಬಾಕ್ಸ್’ ಅಳವಡಿಸಬೇಕು. ಅಲ್ಲಿನ ಮಹಿಳೆಯರು ತಮಗೆ ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಉಂಟಾದರೆ ಶೀ ಬಾಕ್ಸ್ ನಲ್ಲಿ ದೂರು ಹಾಕಬೇಕು ಎಂದು ಹೇಳಿದರು.