ಧಾರವಾಡ: ಕಬ್ಬು ಬೆಳೆಗಾರರ ಹೋರಾಟಕ್ಕೆ ರಾಜ್ಯ ಸರ್ಕಾರ ಹಾಗೂ ಸಚಿವರು ರೈತರೊಂದಿಗೆ ಇರಲಿದ್ದಾರೆ. ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವವರೆಗೂ ರೈತರ ಹೋರಾಟ ಮುಂದುವರಿಯಲಿ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಧಾರವಾಡ ನಗರದಲ್ಲಿ ಕಬ್ಬು ಬೆಳೆಗಾರರ ಹೋರಾಟದ ಕುರಿತು ಮಾತನಾಡಿದ ಅವರು, ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಸೂಕ್ತ ಪರಿಹಾರ ಕಲ್ಪಿಸಬೇಕಿದೆ. ಎಫ್‌ಆರ್‌ಪಿ ಸೇರಿದಂತೆ ಕಬ್ಬಿನ ಬೆಲೆ ನಿರ್ಧರಿಸುವ ಅಧಿಕಾರ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ಸಕ್ಕರೆ ಕಾರ್ಖಾನೆಗಳು ಹಾಗೂ ಎಥೆನಾಲ್ ಘಟಕಗಳಿಗೆ ಅನುಮತಿ ನೀಡುವುದೂ ಕೇಂದ್ರ ಸರ್ಕಾರವೇ. ಹೀಗಾಗಿ ಕೇಂದ್ರ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ದೇಶದಲ್ಲಿ ವರ್ಷಕ್ಕೆ ಸುಮಾರು 6 ಸಾವಿರ ಕೋಟಿ ಲೀಟರ್ ಪೆಟ್ರೋಲ್ ಬಳಕೆಯಾಗುತ್ತಿದ್ದು, ಅದರಲ್ಲಿ ಶೇ.20ರಷ್ಟು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ. ಸಕ್ಕರೆ ಕಾರ್ಖಾನೆಗಳಲ್ಲಿಯೇ ಎಥೆನಾಲ್ ಉತ್ಪಾದನೆಯಾಗುತ್ತದೆ. ಕೇಂದ್ರ ಸರ್ಕಾರ ಎಥೆನಾಲ್ ಉತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಪ್ರಸ್ತುತ ಎಥೆನಾಲ್ ಅನ್ನು ಲೀಟರ್‌ಗೆ ಸುಮಾರು 55 ರೂ. ಗೆ ಖರೀದಿಸಿ, ಮಾರುಕಟ್ಟೆಯಲ್ಲಿ 110 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಪ್ರತಿ ಲೀಟರ್‌ಗೆ ನಾಲ್ಕು ರೂಪಾಯಿಯನ್ನು ರೈತರಿಗೆ ನೀಡಿದರೆ ಅವರ ಬದುಕಿಗೆ ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಉತ್ತರ ಪ್ರದೇಶ, ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳಿಗೆ ಎಥೆನಾಲ್ ಉತ್ಪಾದನೆಗೆ ಹೆಚ್ಚಿನ ಪ್ರಮಾಣದ ಕೋಟಾ ನೀಡಲಾಗುತ್ತಿದೆ. ಆದರೆ ಕರ್ನಾಟಕಕ್ಕೆ ಕಡಿಮೆ ಕೋಟಾ ನೀಡಲಾಗುತ್ತಿದೆ. ಎಲ್ಲಿ ಕಾರ್ಖಾನೆಗಳು ಕಡಿಮೆ ಇವೆಯೋ ಅಲ್ಲಿ ಹೆಚ್ಚಿನ ಕೋಟಾ ನೀಡಲಾಗುತ್ತಿದೆ ಎಂಬುದು ಸರಿಯಲ್ಲ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ಇನ್ನೊಂದೆಡೆ, ಬ್ರೆಜಿಲ್‌ನಿಂದ 10 ಲಕ್ಷ ಮೆಟ್ರಿಕ್ ಟನ್ ಸಕ್ಕರೆ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರಿಂದ ದೇಶದ ಕಬ್ಬು ಬೆಳೆಗಾರರ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸುತ್ತಿಲ್ಲ. ಕಳೆದ 12 ವರ್ಷಗಳಲ್ಲಿ ಬೆಲೆ ಏರಿಕೆ ಸೇರಿದಂತೆ ರೈತರ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರವನ್ನು ಪ್ರಶ್ನಿಸುವವರೇ ಇಲ್ಲದಂತಾಗಿದೆ ಎಂದು ಟೀಕಿಸಿದರು.

ಕಬ್ಬು ಹೊಲಗಳಲ್ಲಿಯೇ ಒಣಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರಿಗೆ ನ್ಯಾಯಯುತ ಬೆಲೆ ಹಾಗೂ ಸೂಕ್ತ ಬೆಂಬಲ ಬೆಲೆ ನಿಗದಿಯಾಗುವವರೆಗೂ ಹೋರಾಟ ಮುಂದುವರಿಯಲಿ. ರೈತರ ಹೋರಾಟಕ್ಕೆ ನಮ್ಮ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಂತೋಷ ಲಾಡ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor