Dharwad | ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ ಆರೋಪ: ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ ಜೋಶಿ ವಿರುದ್ಧ ಎಫ್‌ಐಆರ್ ದಾಖಲು
ಗೋಪಾಲ ಜೋಶಿ
ಧಾರವಾಡ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಮಾಡಿಸುವುದಾಗಿ ಬೆದರಿಕೆಯೊಡ್ಡಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ ಜೋಶಿ ವಿರುದ್ಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಆ.6ರಂದು ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದು, ಅವರ ದೂರಿನ ಆಧಾರದ ಗೋಪಾಲ ಜೋಶಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
"ಆರೋಪಿಯು ನನಗೆ ದೀರ್ಘಕಾಲದಿಂದ ಮಾನಸಿಕವಾಗಿ ಮತ್ತು ಆರ್ಥಿಕವಾಗಿ ಕಿರುಕುಳ ನೀಡುತ್ತಿದ್ದು, ತಮ್ಮ ಕುಟುಂಬಕ್ಕೂ ತೊಂದರೆ ಉಂಟು ಮಾಡಿದ್ದಾನೆ" ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
"2022ರ ಮೇ 29ರಂದು ಧಾರವಾಡದ ಮಾಳಮಡ್ಡಿಯ ಅಪಾರ್ಟ್ಮೆಂಟ್ ಒಂದರಲ್ಲಿ ನನ್ನ ಮೇಲೆ ಆರೋಪಿ ಜೋಶಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆಯ ಕುರಿತು ಎಲ್ಲಾದರೂ ಬಾಯಿಬಿಟ್ಟರೆ ಕೊಲೆ ಮಾಡಿಸುವುದಾಗಿ ಜೀವ ಬೆದರಿಕೆಯನ್ನೂ ಹಾಕಿದ್ದಾನೆ" ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಆದಾಗ್ಯೂ, ತಮ್ಮ ಮೇಲಾದ ದೌರ್ಜನ್ಯದ ಬಗ್ಗೆ ಕುಟುಂಬದವರಿಗೆ ತಿಳಿಸಿದಾಗ, ದೂರು ದಾಖಲಿಸಲು ಕುಟುಂಬಸ್ಥರು ಸೂಚಿಸಿದ್ದು, ಅದರಂತೆ ತಡವಾಗಿ ದೂರು ದಾಖಲಿಸಿದ್ದೇನೆ ಎಂದು ಮಹಿಳೆ ತಿಳಿಸಿದ್ದಾರೆ.