×
Ad

Hubballi : ಈ.ಡಿ. ಹೆಸರಿನಲ್ಲಿ 3 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸುಲಿಗೆ; ತಡವಾಗಿ ಬೆಳಕಿಗೆ ಬಂದ ಘಟನೆ

Update: 2025-11-24 23:45 IST

ಸಾಂದರ್ಭಿಕ ಚಿತ್ರ | PC : freepik

ಹುಬ್ಬಳ್ಳಿ : ಈ.ಡಿ. ಹೆಸರಲ್ಲಿ ಮೂರು ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ನ.20 ರಂದು ಹುಬ್ಬಳ್ಳಿಯ ಚೆನ್ನಮ್ಮ ವೃತ್ತ ಸಮೀಪದ ನೀಲಿಜನ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಮಾಡಲಾಗಿದೆ. ಈ.ಡಿ. ಅಧಿಕಾರಿಗಳೆಂದು ಹೇಳಿಕೊಂಡ ಐವರ ತಂಡ ವಿಚಾರಣೆ ನಡೆಸುವ ನೆಪದಲ್ಲಿ 2 ಕೆ.ಜಿ 942 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ನಗದು ದೋಚಿ ಪರಾರಿಯಾಗಿದೆ ಎಂದು ತಿಳಿದು ಬಂದಿದೆ.

ಕೇರಳ ಮೂಲದ ವ್ಯಾಪಾರಿ ಸುದೀನ್ ಎಂ.ಆರ್. ಎಂಬವರು ಚಿನ್ನಾಭರಣ ಅಂಗಡಿಗಳಿಗೆ ಆಭರಣ ಪೂರೈಸುವ ವ್ಯವಹಾರ ಮಾಡುತ್ತಿದ್ದರು. ನ.15ರಂದು ಮಂಗಳೂರಿನಿಂದ ಬೆಳಗಾವಿಗೆ ಕೆಲಸಗಾರ ವಿವೇಕ ಜೊತೆ ಬಂದಿದ್ದ ಸುದೀನ್, ಚೈನ್, ಬ್ರೆಸ್ಲೆಟ್, ಉಂಗುರ ಕಿವಿಯೋಲೆ, ನೆಕ್ಲೆಸ್, ಲಾಕೆಟ್, ಬಳೆ ಸೇರಿ ಒಟ್ಟು 3.2 ಕೋಟಿ ರೂ. ಮೌಲ್ಯದ ಆಭರಣಗಳನ್ನು ತಂದಿದ್ದರೆನ್ನಲಾಗಿದೆ.

ಬೆಳಗಾವಿ, ಧಾರವಾಡ, ಹುಬ್ಬಳ್ಳಿಯಲ್ಲಿರುವ ವಿವಿಧ ಆಭರಣ ಮಳಿಗೆಗಳಿಗೆ ತೆರಳಿ ಆರ್ಡರ್‌ಗಳನ್ನು ಪಡೆದಿದ್ದು, ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದ ಎದುರಿನ ಹೊಟೇಲೊಂದರಲ್ಲಿ ವಾಸ್ತವ್ಯ ಹೂಡಿದ್ದರು. ನ.19ರಂದು ಧಾರವಾಡಕ್ಕೆ ಹೋಗಿ ಹೋಟೆಲ್‌ಗೆ ವಾಪಸ್ ಆಗುವಾಗ, ನೀಲಿಜಿನ್ ರಸ್ತೆಯಲ್ಲಿ ಸುದೀನ್ ಮತ್ತು ಕೆಲಸಗಾರ ವಿವೇಕ ಅವರನ್ನು ಐವರು ತಡೆದಿದ್ದರು. ಅಲ್ಲದೆ, ಈ.ಡಿ. ಅಧಿಕಾರಿಗಳು ಎಂದು ಹಿಂದಿಯಲ್ಲಿ ಮಾತನಾಡಿದ್ದ ದುಷ್ಕರ್ಮಿಗಳು, ಗುರುತಿನ ಪತ್ರ ತೋರಿಸಿ ವಿಚಾರಣೆಗೆ ಕಚೇರಿಗೆ ಬನ್ನಿ ಎಂದು ಕಾರಿನಲ್ಲಿ ಕರೆದೊಯ್ದಿದ್ದರು. ಚಿನ್ನಾಭರಣಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ತಿಳಿದು ಬಂದಿದೆ ಎಂದು ಬೆದರಿಸಿದ್ದರು. ಮೊಬೈಲ್ ಫೋನ್ ಪಡೆದು ಸಿಮ್ ತೆಗೆದಿದ್ದ ದುಷ್ಕರ್ಮಿಗಳು, ನಂತರ ಹಲ್ಲೆ ನಡೆಸಿ ಚಿನ್ನಾಭರಣವಿದ್ದ ಬ್ಯಾಗ್ ಕಿತ್ತುಕೊಂಡಿದ್ದರು. ಬೆಳಗಾವಿ ಮಾರ್ಗ ಮಧ್ಯದಲ್ಲಿ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಸುದೀನ್ ದೂರು ನೀಡಿದ್ದಾರೆ.

ಈ ಸಂಬಂಧ ಉಪ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಲಾಗಿದೆ.

ಹುಬ್ಬಳ್ಳಿಯಲ್ಲಿ ಇಬ್ಬರನ್ನೂ ಕಾರಿನಲ್ಲಿ ಹತ್ತಿಸಿಕೊಂಡಿದ್ದ ದುಷ್ಕರ್ಮಿಗಳು, ಬೆಳಗಾವಿಯ ಕಿತ್ತೂರು ಸಮೀಪ ಕೆಲಸಗಾರ ವಿವೇಕ ಅವರನ್ನು ಇಳಿಸಿದ್ದಾರೆ. ನಂತರ ಸುದೀನ ಅವರನ್ನು ಎಂ.ಕೆ. ಹುಬ್ಬಳ್ಳಿ ರಸ್ತೆಗೆ ಕರೆದೊಯ್ದು ಮಾರ್ಗ ಮಧ್ಯೆ ಬಿಟ್ಟು ನಗದು ಹಾಗೂ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ. ಆದರೆ, ಪ್ರಕರಣ ನಡೆದ ಎರಡು ದಿನಗಳ ನಂತರ ದೂರು ದಾಖಲಿಸಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಕುರಿತು ಉಪ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.

ಮಹಾನಿಂಗ ನಂದಗಾವಿ, ಕಾನೂನು ಸುವ್ಯವಸ್ಥೆ ಡಿಸಿಪಿ, ಹು-ಧಾ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News