Hubballi | 14 ವರ್ಷದ ಬಾಲಕಿಗೆ ಹೆರಿಗೆ; ಪೊಕ್ಸೊ ಪ್ರಕರಣ ದಾಖಲು
ಹುಬ್ಬಳ್ಳಿ: 14 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಾಹಿತಿಯ ಪ್ರಕಾರ, ಬಾಲಕಿಗೆ ಮನೆಯಲ್ಲಿಯೇ ಹೆರಿಗೆಯಾಗಿರುವ ಸಾಧ್ಯತೆ ಇದ್ದು, ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಹೆಚ್ಚಿನ ಚಿಕಿತ್ಸೆಗೆ ಕೆಎಂಸಿ ಆರ್‌ಐಗೆ ದಾಖಲಿಸಲಾಗಿದೆ. ಶಿಶುವಿಗೆ ಮಕ್ಕಳ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಗತ್ಯ ವೈದ್ಯಕೀಯ ಆರೈಕೆ ಒದಗಿಸಲಾಗುತ್ತಿದೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಕೆಎಂಸಿ ಆರ್‌ಐ ಪ್ರಭಾರಿ ಅಧೀಕ್ಷಕ ಡಾ. ರಾಜಶೇಖರ ದ್ಯಾಬೇರಿ, ಜು.8ರಂದು ಹೆರಿಗೆಯಾದ 14 ವರ್ಷದ ಬಾಲಕಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಅಪ್ರಾಪ್ತಳಾಗಿರುವುದರಿಂದ ನಿರ್ಭಯ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಬಾಲಕಿ ಆಘಾತದಲ್ಲಿರುವ ಕಾರಣ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಚಿಕಿತ್ಸೆ ನಮ್ಮ ಮೊದಲ ಆದ್ಯತೆಯಾಗಿದೆ. ಮಕ್ಕಳ ರಕ್ಷಣಾ ಘಟಕ, ವೈದ್ಯಕೀಯ ಸಿಬ್ಬಂದಿ ಹಾಗೂ ನಿರ್ಭಯ ವಾರ್ಡ್ ಸಿಬ್ಬಂದಿ ಆಕೆಯ ಆರೈಕೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಹುಬ್ಬಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.