Hubballi | ಅಂಜಲಿ ಅಂಬಿಗೇರ ಕೊಲೆ ಪ್ರಕರಣ : ಆರೋಪಿ ಗಿರೀಶ್ ದೋಷಿ ಎಂದು ಕೋರ್ಟ್ ತೀರ್ಪು
ಅಂಜಲಿ ಅಂಬಿಗೇರ, ಆರೋಪಿ ವಿಶ್ವನಾಥ್
ಹುಬ್ಬಳ್ಳಿ : ನಗರದ ವೀರಾಪುರ ಓಣಿಯಲ್ಲಿ 2024ರ ಮೇ 15ರಂದು ನಡೆದ 20 ವರ್ಷದ ಅಂಜಲಿ ಅಂಬಿಗೇರ ಅವರ ಬರ್ಬರ ಕೊಲೆ ಪ್ರಕರಣದಲ್ಲಿ ಆರೋಪಿ ಗಿರೀಶ್ ಅಲಿಯಾಸ್ ವಿಶ್ವನಾಥ ಸಾವಂತ್ ಅಪರಾಧಿ ಎಂದು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ವಾದ-ಪ್ರತಿವಾದ ಹಾಗೂ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪಿ ಗಿರೀಶ್‌ನನ್ನು ಅಪರಾಧಿ ಎಂದು ಘೋಷಿಸಿದೆ. ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣವನ್ನು ನ.25ರಂದು ಪ್ರಕಟಿಸಲು ನ್ಯಾಯಾಲಯ ದಿನಾಂಕ ನಿಗದಿಪಡಿಸಿದೆ.
2024ರ ಮೇ 15ರಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಡೆದ ಘಟನೆ ನಗರವನ್ನೇ ಬೆಚ್ಚಿಬೀಳಿಸಿತ್ತು. ಮನೆಯಲ್ಲಿ ಮಲಗಿದ್ದ ಅಂಜಲಿಯನ್ನು ಎಬ್ಬಿಸಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. 20 ವರ್ಷದ ಯುವತಿಯ ಬರ್ಬರ ಹತ್ಯೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಮೂಡಿಸಿತ್ತು.
ಪ್ರಕರಣದ ಗಂಭೀರತೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ಅಧಿಕಾರಿಗಳು ತನಿಖೆ ನಡೆಸಿ 494 ಪುಟಗಳ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಬಳಿಕ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಸಾಕ್ಷಿಗಳ ಹೇಳಿಕೆಗಳು ಹಾಗೂ ವಿವಿಧ ಸಾಕ್ಷ್ಯಗಳನ್ನು ಆಲಿಸಿದ ನಂತರ ಇದೀಗ ಆರೋಪಿಯನ್ನು ಅಪರಾಧಿ ಎಂದು ಘೋಷಿಸಲಾಗಿದೆ.