ಹುಬ್ಬಳ್ಳಿ: ಮನೆ ಹಸ್ತಾಂತರ ಕಾರ್ಯಕ್ರಮದ ವೇಳೆ ಕುಸಿದು ಬಿದ್ದ ಕಟೌಟ್; ಮಹಿಳೆ ಸೇರಿ ಮೂವರಿಗೆ ಗಾಯ
ಹುಬ್ಬಳ್ಳಿ: ನಗರದ ಮಂಟೂರ ರಸ್ತೆಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ವಸತಿ ಇಲಾಖೆಯ ಸಹಯೋಗದಲ್ಲಿ ಇಂದು ಮನೆ ಹಂಚಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕಾಗಿ ಅಳವಡಿಸಿದ್ದ ಬೃಹತ್ ಕಟೌಟ್ ಬಿದ್ದು ಮಹಿಳೆ ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.
ಗಾಯಗೊಂಡವರು ಕಟೌಟ್ ಅಳವಡಿಸುವ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರಾದ ಬ್ಯಾಹಟ್ಟಿ ಗ್ರಾಮದ ನಿವಾಸಿಗಳಾದ ಶಂಕರ್ ಹಡಪದ (32) ಮತ್ತು ಮಂಜುನಾಥ ವರ್ಣೇಕರ್ (33) ಎಂದು ಗುರುತಿಸಲಾಗಿದೆ. ಮತ್ತೊಬ್ಬರು ಗಂಗಾಧರ ನಗರದ ನಿವಾಸಿ ಶಾಂತಾ (60)ಅವರು ಕಾರ್ಯಕ್ರಮ ವೀಕ್ಷಣೆಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ.
ಗಾಯಗೊಂಡ ಮೂವರಲ್ಲಿ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮತ್ತೊಬ್ಬರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಂಗ್ರೆಸ್ ಪಕ್ಷದ ವತಿಯಿಂದ ಮಂಟೂರ ರಸ್ತೆಯ ಎರಡೂ ಬದಿಗಳಲ್ಲಿ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಮಲ್ಲಿಕಾರ್ಜುನ ಖರ್ಗೆ ಅವರ ಕಟೌಟ್ ನಂತರ, ಮುಖ್ಯಮಂತ್ರಿ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಫೋಟೋಗಳಿದ್ದ ಎರಡು ಕಟೌಟ್‌ಗಳು ಒಂದರ ಮೇಲೆ ಒಂದು ಬಿದ್ದು, ಅವುಗಳ ಕೆಳಗಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಟೌಟ್‌ಗಳು ಸುಮಾರು 30–35 ಅಡಿ ಎತ್ತರವಾಗಿದ್ದು, ಅವುಗಳಿಗೆ ಆಧಾರವಾಗಿ ಕಟ್ಟಿಗೆಗಳನ್ನು ಅಳವಡಿಸಲಾಗಿತ್ತು. ಕಟೌಟ್ ಬಿದ್ದ ವೇಳೆ ಕಟ್ಟಿಗೆಗಳು ದೇಹಕ್ಕೆ ಚುಚ್ಚಿ ಗಾಯಗಳಾಗಿವೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಟೌಟ್ ಬಿದ್ದ ಸ್ಥಳದಿಂದ ಕೇವಲ ಕೆಲವೇ ಅಡಿಗಳ ದೂರದಲ್ಲಿ ಹತ್ತಕ್ಕೂ ಹೆಚ್ಚು ಪೊಲೀಸರು ನಿಂತಿದ್ದರು. ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಭದ್ರತೆ ಹಾಗೂ ಕಾರ್ಯಕ್ರಮದ ಆಯೋಜನೆಯಲ್ಲಿ ನಡೆದ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದ್ಯ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿಸಲಾಗಿದೆ. ಕುಸಿದ ಕಟೌಟ್ ಅನ್ನು ತೆರವುಗೊಳಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾರ್ಯಕ್ರಮ ಮುಂದುವರಿಸಲು ಅವಕಾಶ ಕಲ್ಪಿಸಲಾಗಿದೆ.