Hubballi | ಕಬ್ಬಿನ ಬೆಲೆ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ಕೇಂದ್ರ ಸರಕಾರ, ಪ್ರಹ್ಲಾದ್ ಜೋಶಿ ವಿರುದ್ಧ ಆಕ್ರೋಶ
ಹುಬ್ಬಳ್ಳಿ: ಕಬ್ಬಿನ ಬೆಲೆ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿರುವ ರೈತರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಕಾರರು ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸ್ವಾಮಿನಾಥನ್ ಆಯೋಗದ ವರದಿ ಜಾರಿಗೊಳಿಸಬೇಕು, ರಾಜ್ಯದಲ್ಲಿ ಕೃಷಿ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ಪೂರ್ಣ ಪ್ರಮಾಣದ ಅನುಮತಿ ನೀಡಬೇಕು, ಸಕ್ಕರೆ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 2025-26ನೇ ಸಾಲಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ಹೆಚ್ಚುವರಿಯಾಗಿ ಪ್ರತಿ ಟನ್‌ಗೆ 300 ರೂ. ನೀಡಬೇಕು ಎಂದು ರೈತರು ಆಗ್ರಹಿಸುತ್ತಿದ್ದಾರೆ.
ಈ ವೇಳೆ ಮಾತನಾಡಿದ ರೈತ ಮುಖಂಡ ಚುನ್ನಪ್ಪ ಪೂಜೇರಿ, ಕಬ್ಬಿನ ಬೆಲೆ ಏರಿಕೆ ಮಾಡುವವರೆಗೆ ರೈತರ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಕಳೆದ 20 ವರ್ಷಗಳಿಂದ ಎಂಎಸ್‌ಪಿ ಬೆಲೆ ಏರಿಕೆಯಾಗಿಲ್ಲ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೊಳಿಸಬೇಕು. ರಾಜ್ಯದಲ್ಲಿ ಉತ್ಪಾದನೆಯಾಗುವ ಎಥೆನಾಲ್ ಖರೀದಿಸಬೇಕು ಎಂದು ಆಗ್ರಹಿಸಿದರು.
ರೈತರ ಹೋರಾಟವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದರೆ, ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧದ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ರೈತರಿಗೆ ಅನ್ಯಾಯ ಮಾಡಿದರೆ ಸರ್ಕಾರದ ನಾಟಕಕ್ಕೆ ತಕ್ಕ ಉತ್ತರ ನೀಡುವುದು ನಮಗೆ ಗೊತ್ತಿದೆ ಎಂದು ಹೇಳಿದರು.
ರೈತರ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ದೆಹಲಿಗೆ ತೆರಳುವ ಅಗತ್ಯವಿಲ್ಲ. ರೈತರ ಬೇಡಿಕೆಗಳ ಕುರಿತು ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.