ಹುಬ್ಬಳ್ಳಿ : ಮಹದಾಯಿ ನದಿ ನೀರು ಹಂಚಿಕೆ ಸಂಬಂಧ 2013ರಲ್ಲಿ ನಡೆದ ಹೋರಾಟದ ವೇಳೆ ರೈಲು ತಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಒಂದನೇ ಜೆಎಂಎಫ್‌ಸಿ ನ್ಯಾಯಾಲಯ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಕೋಡಿಹಳ್ಳಿ ಚಂದ್ರಶೇಖರ್ ಪರ ವಕೀಲರು ಹಾಗೂ ಸರಕಾರಿ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಹಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿತು.

ಮಹದಾಯಿ ನದಿ ನೀರು ಹಂಚಿಕೆಗೆ ಆಗ್ರಹಿಸಿ ನಡೆದ ಹೋರಾಟದ ಸಂದರ್ಭದಲ್ಲಿ ಹುಬ್ಬಳ್ಳಿ ರೈಲ್ವೆ ಪೊಲೀಸರು 2013ರಲ್ಲಿ ಎರಡು ಪ್ರಕರಣ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಿಂದ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಚಂದ್ರ ಶೇಖರ್ ಅವರನ್ನು ಆರ್‌ಪಿಎಫ್ ನಿರೀಕ್ಷಕ ಬಿ.ಕೆ. ಪ್ರಕಾಶ ನೇತೃತ್ವದ ತಂಡ ಸೆ.28ರಂದು ಶಿರಸಿಯಲ್ಲಿ ಬಂಧಿಸಿತ್ತು. ಬಳಿಕ ಅವರನ್ನು ಹುಬ್ಬಳ್ಳಿಯ ಒಂದನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಸಚಿನಕುಮಾರ ಶಿವಪೂಜಿ ಅವರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದರು. ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿ ಉಪಕಾರಾಗೃಹದಲ್ಲಿದ್ದ ಕೋಡಿಹಳ್ಳಿ ಅವರಿಗೆ ಗುರುವಾರ ಜಾಮೀನು ದೊರೆತ ಹಿನ್ನೆಲೆಯಲ್ಲಿ ಸಂಜೆ ಬಿಡುಗಡೆಯಾದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor