ಧಾರವಾಡ : ಸರಕಾರಿ ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ವೈದ್ಯರು ಮತ್ತು ಸಿಬ್ಬಂದಿಯ ಪ್ರಮುಖ ಜವಾಬ್ದಾರಿಯಾಗಿದೆ. ಸಣ್ಣಪುಟ್ಟ ಲೋಪದೋಷಗಳಿಂದ ಸರಕಾರಿ ಆಸ್ಪತ್ರೆಗಳ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡದಂತೆ ಎಚ್ಚರ ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದರು.

ಶನಿವಾರ ಧಾರವಾಡದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ತಮ್ಮ ಕೇಂದ್ರವನ್ನು ಸ್ವಂತ ಸಂಸ್ಥೆಯಂತೆ ಭಾವಿಸಿ, ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ವೈದ್ಯರು ಸಮಯಪಾಲನೆಗೆ ಆದ್ಯತೆ ನೀಡಿ, ಸಿಬ್ಬಂದಿಗೂ ಮಾದರಿಯಾಗಬೇಕು. ಆಸ್ಪತ್ರೆಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕು. ರೋಗಿಗಳಿಗೆ ಧೈರ್ಯ ಹಾಗೂ ನಂಬಿಕೆ ಮೂಡುವ ವಾತಾವರಣ ನಿರ್ಮಿಸಬೇಕು ಎಂದು ಅವರು ಕರೆ ನೀಡಿದರು.

ವೈದ್ಯರ ವರ್ಗಾವಣೆ ಸಮಾಲೋಚನೆಯಲ್ಲಿ ಪತಿ-ಪತ್ನಿ ಒಂದೇ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅನುಕೂಲವಾಗುವಂತೆ ಕೆಲವು ಬದಲಾವಣೆ ತರಲಾಗುವುದು. ಉತ್ತಮ ಸೇವೆ ಸಲ್ಲಿಸಿರುವ ವೈದ್ಯರಿಗೆ ಅದೇ ಸ್ಥಳದಲ್ಲಿ ಮುಂದುವರಿಯಲು ಅವಕಾಶ ನೀಡುವ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು. ಗುತ್ತಿಗೆ ಆಧಾರದ ಮೇಲೆ 3 ರಿಂದ 5 ವರ್ಷ ಸೇವೆ ಸಲ್ಲಿಸಿರುವ ವೈದ್ಯರನ್ನು ಖಾಯಂಗೊಳಿಸುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಖಾದರ್ ಹೇಳಿದರು.

ತಾಲೂಕು ಮಟ್ಟದಲ್ಲಿ ಸಂಘ-ಸಂಸ್ಥೆಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ವೈದ್ಯರು ನಿರಂತರ ಸಂಪರ್ಕದಲ್ಲಿದ್ದು, ಆಸ್ಪತ್ರೆಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಪಡೆಯಲು ನಾಯಕತ್ವ ವಹಿಸಬೇಕು. ಆಸ್ಪತ್ರೆಗಳ ಸ್ವಚ್ಛತೆ, ಪೇಂಟಿಂಗ್ ಸೇರಿದಂತೆ ಸಣ್ಣಪುಟ್ಟ ಅಗತ್ಯಗಳಿಗೆ ಸ್ಥಳೀಯ ಸಂಘ-ಸಂಸ್ಥೆಗಳು, ದಾನಿಗಳು ಹಾಗೂ ಕಾಲೇಜುಗಳ ಎನ್.ಸಿ.ಸಿ ತಂಡಗಳ ಸಹಕಾರ ಪಡೆಯಬೇಕು ಎಂದು ಅವರು ತಿಳಿಸಿದರು.

ವೈದ್ಯರು ತಮ್ಮ ವೃತ್ತಿಯ ಜೊತೆಗೆ ನಿರ್ವಹಣಾ ಕೌಶಲ್ಯಕ್ಕೂ ಹೆಚ್ಚಿನ ಒತ್ತು ನೀಡಬೇಕು. ವೈದ್ಯರು ಹಾಗೂ ಸಿಬ್ಬಂದಿ ತಂಡವಾಗಿ, ಕುಟುಂಬದ ರೀತಿಯಲ್ಲಿ ಪರಸ್ಪರ ಸಹಕಾರದಿಂದ ಕೆಲಸ ಮಾಡಿದಾಗ ಮಾತ್ರ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಸಾಧ್ಯ ಎಂದು ಖಾದರ್ ಅಭಿಪ್ರಾಯಪಟ್ಟರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉತ್ತಮ ಪ್ರಾಥಮಿಕ ಚಿಕಿತ್ಸೆ ನೀಡಿ, ಅಗತ್ಯವಿರುವ ರೋಗಿಗಳನ್ನು 108 ಆಂಬುಲೆನ್ಸ್ ಮೂಲಕ 20–30 ನಿಮಿಷಗಳಲ್ಲಿ ತಾಲೂಕು ಆಸ್ಪತ್ರೆಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಬೇಕು. ತಾಲೂಕು ಆಸ್ಪತ್ರೆಗಳಲ್ಲೆ ಮರಣೋತ್ತರ ಪರೀಕ್ಷೆ ಸೇರಿದಂತೆ ಪ್ರಮುಖ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಿ, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸಬೇಕು ಎಂದು ಅವರು ಹೇಳಿದರು.

ಜಿಲ್ಲೆಯ ಸರಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ಬಹುತೇಕ ಹುದ್ದೆಗಳು ಭರ್ತಿಯಾಗಿದ್ದು, ಕೆಲವೆಡೆ ಮಾತ್ರ ಎಂ.ಬಿ.ಬಿ.ಎಸ್ ವೈದ್ಯರ ಕೊರತೆ ಇದೆ. ಈ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲು ಈಗಾಗಲೇ ಆದೇಶ ನೀಡಲಾಗಿದೆ. ತಾಲೂಕು ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೊರತೆಯನ್ನೂ ತಕ್ಷಣ ಸರಿಪಡಿಸಲಾಗುವುದು. ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾಮಥ್ರ್ಯ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದು ಅವರು ಹೇಳಿದರು.

ನಕಲಿ ವೈದ್ಯರು ಪತ್ತೆಯಾದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸಂಬಂಧಪಟ್ಟ ಡಿಎಚ್‍ಒ ಮತ್ತು ಟಿಎಚ್‍ಒಗಳ ನಿರ್ಲಕ್ಷ್ಯ ಕಂಡುಬಂದರೆ ಅವರ ಮೇಲೂ ಕ್ರಮ ಕೈಗೊಳ್ಳುವ ಕುರಿತು ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಖಾದರ್ ಎಚ್ಚರಿಕೆ ನೀಡಿದರು.

ಶಾಸಕರಾದ ವಿನಯ ಕುಲಕರ್ಣಿ, ಪ್ರಸಾದ್ ಅಬ್ಬಯ್ಯ, ಎನ್.ಎಚ್.ಕೋನರೆಡ್ಡಿ ಮಾತನಾಡಿದರು. ವೇದಿಕೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ್ ಪಾಟೀಲ್ ಉಪಸ್ಥಿತರಿದ್ದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪರಶುರಾಮ ಎಫ್.ಕೆ, ಜಿಲ್ಲಾ ಮತ್ತು ತಾಲೂಕು ಮಟ್ಟದ ವೈದ್ಯಾಧಿಕಾರಿಗಳು, ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳು ಭಾಗವಹಿಸಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor