×
Ad

ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ಮುಗಿಸಲು ಸಂಚು: ಅರವಿಂದ ಬೆಲ್ಲದ್ ಆರೋಪ

Update: 2025-07-21 22:47 IST

ಹುಬ್ಬಳ್ಳಿ : ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಮುಗಿಸಿದರೆ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಬೇಡಿಕೆಯ ಹೋರಾಟ ಅಂತ್ಯವಾಗಲಿದೆ ಎಂದು ಕಾಂಗ್ರೆಸ್ ಸರಕಾರ ಭಾವಿಸಿದಂತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್‌ ಆರೋಪಿಸಿದ್ದಾರೆ.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಿಸಲು ಸ್ವಾಮೀಜಿ ನಿರಂತರವಾಗಿ ಹೋರಾಡುತ್ತಿದ್ದಾರೆ. ಇತ್ತೀಚೆಗೆ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳನ್ನು ಲಿಂಗಾಯತ ಪಂಚಮಸಾಲಿ ಸಮಾಜ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸ್ವಾಮೀಜಿಗೆ ತೊಂದರೆ ಕೊಟ್ಟು, ಹೋರಾಟ ಹತ್ತಿಕ್ಕುವ ಷಡ್ಯಂತ್ರ ನಡೆಯುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಬಸವಜಯ ಮೃತ್ಯುಂಜಯ ಸ್ವಾಮೀಜಿ ಯಾವ ಪಕ್ಷಕ್ಕೂ, ಮಠಕ್ಕೂ ಸೀಮಿತವಾಗಿಲ್ಲ. ಅವರು ಸಮಾಜದ ಏಳಿಗೆಗೆ ಶ್ರಮಿಸುತ್ತಿದ್ದಾರೆ. ಹಿಂದೆ ಬಿಜೆಪಿ ಸರಕಾರ 2ಎ ಮೀಸಲಾತಿ ನೀಡುವುದಾಗಿ ಘೋಷಿಸಿತ್ತು. ಈಗಿನ ಕಾಂಗ್ರೆಸ್ ಸರಕಾರ ಅದನ್ನು ಜಾರಿಗೆ ತರುತ್ತಿಲ್ಲ ಎಂದು ಹೇಳಿದರು.

"ವಿಷಪೂರಿತ ಆಹಾರ ಸೇವನೆಯಿಂದ ಸ್ವಾಮೀಜಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ತಿನ್ನುವ ಆಹಾರದಲ್ಲಿ ವಿಷ ಬೆರೆಸಲಾಗಿದೆ ಎಂದು ಸ್ವಾಮೀಜಿಯವರೇ ಶಂಕೆ ವ್ಯಕ್ತಪಡಿಸಿದ್ದಾರೆ. ಸತ್ಯವಾಗಿದ್ದರೆ ದೊಡ್ಡ ದುಷ್ಕೃತ್ಯ" ಎಂದು ಖಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News