ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ: ರಸ್ತೆ ತಡೆ ಯತ್ನ, 15ಕ್ಕೂ ಹೆಚ್ಚು ಮಂದಿ ವಶಕ್ಕೆ

Update: 2026-07-24 19:11 IST

ಹುಬ್ಬಳ್ಳಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಅದರ ಪರಿಣಾಮವಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉಂಟಾಗಿರುವ ಅನಿಶ್ಚಿತತೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಶುಕ್ರವಾರ ನಗರದ ವಿದ್ಯಾನಗರದ ಕಿಮ್ಸ್ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನೆಯಲ್ಲಿ ರಸ್ತೆ ತಡೆ ನಡೆಸಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ 15ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ವಿದ್ಯಾರ್ಥಿ ಸಮುದಾಯ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಪಾಯದಲ್ಲಿದೆ ಎಂದು ಆರೋಪಿಸಿದರು.

ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮ ಕೈಗೊಂಡಿರುವುದನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕೃತಿಗಳನ್ನು ದಹಿಸಲು ಮುಂದಾದಾಗ ಪೊಲೀಸರು ತಡೆದರು.

ಈ ಸಂದರ್ಭ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಕೆಲಕಾಲ ನೂಕುನುಗ್ಗಲು ಉಂಟಾಯಿತು. ಬಳಿಕ ಕೆಲ ವಿದ್ಯಾರ್ಥಿಗಳು ಮುಖ್ಯರಸ್ತೆ ತಡೆ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಂಡು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, "ಪ್ರತಿಭಟನೆಗೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಅನುಮತಿ ನೀಡಲಾಗಿತ್ತು. ಬಳಿಕ ಮುಖ್ಯರಸ್ತೆ ತಡೆ ಹಾಗೂ ಟೈರ್ ಸುಡುವ ಉದ್ದೇಶವಿದೆ ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 15ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ" ಎಂದು ತಿಳಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News