ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯ, ಬೆಲೆ ಏರಿಕೆ, ರೈತರ ಸಮಸ್ಯೆ ಹಾಗೂ ಭ್ರಷ್ಟಾಚಾರ ಖಂಡಿಸಿ ನ.23ರಿಂದ 25ರವರೆಗೆ ರಾಜ್ಯದ ಎಲ್ಲ ಜಿಲ್ಲೆ ಮತ್ತು ಮಂಡಲ ಮಟ್ಟದಲ್ಲಿ ಬಿಜೆಪಿ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಆದ್ಯತೆ ನೀಡಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. 3,500ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬರದಿಂದ ಜಾನುವಾರುಗಳಿಗೆ ನೀರಿಲ್ಲದೆ ರೈತರು ಅವುಗಳನ್ನು ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬರ ಪರಿಹಾರವಾಗಿ 2,500 ರೂ ನೀಡುವ ಭರವಸೆಯನ್ನೂ ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿ ಹಾಲು, ಮೊಸರು, ಬಸ್ ಪ್ರಯಾಣ ಹಾಗೂ ವಿದ್ಯುತ್ ದರ ಹೆಚ್ಚಳದಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ವಿವಿಧ ತೆರಿಗೆಗಳ ಮೂಲಕ ಜನರ ಮೇಲೆ ಹೊರೆ ಹಾಕಲಾಗುತ್ತಿದೆ ಎಂದರು.

ಎಸ್ಸಿ, ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ. ಮೀಸಲಾತಿ ಹೆಚ್ಚಳ ಮತ್ತು ಒಳಮೀಸಲಾತಿ ವಿಚಾರದಲ್ಲಿಯೂ ಸರ್ಕಾರ ಸಮುದಾಯಗಳಿಗೆ ಅನ್ಯಾಯ ಮಾಡಿದೆ. ಈ ಅನುದಾನವನ್ನು ಮರಳಿ ಸಂಬಂಧಿಸಿದ ಇಲಾಖೆಗೆ ನೀಡಬೇಕು ಎಂದು ಒತ್ತಾಯಿಸಿದರು.

ನ.26ರಂದು ಸಂವಿಧಾನ ದಿನ ಆಚರಿಸಲಾಗುವುದು. ಪ್ರಧಾನಿ ಮೋದಿ ಅಂಬೇಡ್ಕರ್ ಅವರ ಸ್ಮರಣಾರ್ಥ ಪಂಚತೀರ್ಥಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದಾರೆ. ಆದರೆ ಕಾಂಗ್ರೆಸ್ ಅಂಬೇಡ್ಕರ್ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಪ ಲಿಂಗರಾಜ ಪಾಟೀಲ್, ಪ್ರದೀಪ್ ಶೆಟ್ಟರ್, ಶಂಕರ ಪಾಟೀಲ್ ಮುನೇನಕೊಪ್ಪ, ಮಹೇಂದ್ರ ಕೌತಾಳ, ಮಣಿಕಂಠ ಶ್ಯಾಗೋಟಿ, ದುರ್ಗಮ್ಮ ಬೆಜವಾಡ, ವಸಂತ ನಾಡಜೋಶಿ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor