ಧಾರವಾಡದಲ್ಲಿ ಕಬ್ಬು ಬೆಳೆಗಾರರ ಆಕ್ರೋಶ: 2ನೇ ದಿನವೂ ಮುಂದುವರಿದ ರಾಷ್ಟ್ರೀಯ ಹೆದ್ದಾರಿ ಬಂದ್ ಹೋರಾಟ
ಧಾರವಾಡ : ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮತ್ತು ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ಧಾರವಾಡ ಬಳಿಯ ಯರಿಕೊಪ್ಪ ಬಳಿ ನಡೆಯುತ್ತಿರುವ ಹೆದ್ದಾರಿ ಬಂದ್ ಹೋರಾಟ 2ನೇ ದಿನವಾದ ಬುಧವಾರವೂ ಮುಂದುವರಿದಿದೆ.
ದಿಲ್ಲಿಯಲ್ಲಿ ಕೇಂದ್ರ ಸರಕಾರದೊಂದಿಗೆ ಅ.12ರಂದು ರೈತರ ಸಭೆ ನಡೆದಿತ್ತು. ಆದರೆ ಅಲ್ಲಿ ಯಾವುದೇ ಅಂತಿಮ ನಿರ್ಧಾರಕ್ಕೆ ಬರದಿರುವುದರಿಂದ ಸಭೆ ವಿಫಲವಾಗಿದೆ ಎಂದು ರೈತ ಸಂಘಟನೆಗಳು ಹೇರಿರುವ ರಾಷ್ಟ್ರೀಯ ಹೆದ್ದಾರಿ 4ರ ಬಂದ್ ಇಂದೂ ಮುಂದುವರೆದಿದೆ.
ನಿನ್ನೆ ಬೆಂಗಳೂರು–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿದ ರೈತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನಗಳನ್ನು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಪೊಲೀಸರು ವ್ಯವಸ್ಥೆ ಮಾಡಿದ್ದರು.
ದಿಲ್ಲಿಯಲ್ಲಿ ರೈತರ ಬೇಡಿಕೆಗಳ ಕುರಿತು ನಡೆದ ಮಹತ್ವದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲು ರೈತ ಸಂಘಟನೆಗಳು ಕರೆ ನೀಡಿದ್ದವು. ಅದರಂತೆ ಯರಿಕೊಪ್ಪ ಕ್ರಾಸ್ ಬಳಿ ಜಮಾಯಿಸಿದ ನೂರಾರು ರೈತರು ಹಸಿರು ಶಾಲು ಬೀಸಿ, ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿದರು. ಬೇಡಿಕೆ ಈಡೇರುವವರೆಗೆ ಹೋರಾಟ ಹಿಂಪಡೆಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.