ಗದಗ | ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಆಭರಣ ಕಳವು
Update: 2025-07-09 14:18 IST
ಗದಗ : ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ನಗದನ್ನು ಕಳವು ಮಾಡಿರುವ ಘಟನೆ ಗದಗ ಜಿಲ್ಲೆಯ ಮುಳಗುಂದ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ 2ನೇ ನಂಬರ್ ಶಾಲೆ ಬಳಿ ಸಂಗಪ್ಪ ಮಟ್ಟಿ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನವಾಗಿದ್ದು, ಸಂಗಪ್ಪ ಸಂಬಂಧಿಕರ ಊರಿಗೆ ಹೋಗಿದ್ದರು. ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಳ್ಳರು, ನಸುಕಿನ ವೇಳೆ ಕಳ್ಳತನ ನಡೆಸಿದ್ದಾರೆ.
ಮನೆಯಲ್ಲಿದ್ದ ಸುಮಾರು 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳು, ಐದು ಸಾವಿರ ರೂ. ನಗದು ಕಳ್ಳತನವಾಗಿವೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮುಳಗುಂದ ಪೊಲೀಸರ ಭೇಟಿ ನೀಡಿದ್ದು, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ದಿಂದ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಗದಗ ಜಿಲ್ಲೆ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.