Photo Credit: Abdul Basheer - indiatoday

ರಿಯಾದ್, ಅ. 11: ಸೌದಿ ಅರೇಬಿಯದ ರಿಯಾದ್‌ ನ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಅಕ್ಟೋಬರ್ 10ರಂದು ಕ್ಷಿಪಣಿ ಅಪ್ಪಳಿಸಿದ ಘಟನೆಯಲ್ಲಿ ಹೈದರಾಬಾದ್ ಮೂಲದ ಐಟಿ ಉದ್ಯೋಗಿ ಮುಹಮ್ಮದ್ ಯೂಸುಫ್ (46) ಮೃತಪಟ್ಟಿದ್ದಾರೆ. ಅವರ ಪತ್ನಿ ಮತ್ತು ಮೂವರು ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೈದರಾಬಾದ್‌ ನ ಮೆಹದಿಪಟ್ಟಣದ ನಿವಾಸಿಯಾಗಿದ್ದ ಯೂಸುಫ್, ಕುಟುಂಬದೊಂದಿಗೆ ಉಮ್ರಾ ಯಾತ್ರೆ ಕೈಗೊಂಡು ಮದೀನಾಕ್ಕೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಸ್ಥಳೀಯ ಕಾಲಮಾನ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಟುಂಬವು ಚೆಕ್‌-ಇನ್ ಕಿಯೋಸ್ಕ್ ಬಳಿ ಕಾಯುತ್ತಿದ್ದಾಗ ವಿಮಾನ ನಿಲ್ದಾಣದ ಆವರಣಕ್ಕೆ ಸಿಡಿತಲೆ ಅಪ್ಪಳಿಸಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಯೂಸುಫ್ ಬಳಿಕ ಮೃತಪಟ್ಟಿದ್ದಾರೆ. ಅವರ ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಗೂ ಗಾಯಗಳಾಗಿವೆ. ನಾಲ್ವರೂ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದು, ಪುತ್ರರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ.

ಕುಟುಂಬಕ್ಕೆ ನೆರವಿನ ಭರವಸೆ

ಯೂಸುಫ್ ಅವರ ಸಾವಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಅಗತ್ಯವಿರುವ ಎಲ್ಲ ನೆರವು ನೀಡುವುದಾಗಿ ತಿಳಿಸಿದ್ದಾರೆ.

‘ರಿಯಾದ್‌ನಲ್ಲಿ ನಡೆದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಮೃತಪಟ್ಟಿರುವುದು ತೀವ್ರ ದುಃಖ ತಂದಿದೆ. ಶೋಕತಪ್ತ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು. ರಾಯಭಾರ ಕಚೇರಿಯು ಸಾಧ್ಯವಿರುವ ಎಲ್ಲ ನೆರವನ್ನೂ ನೀಡಲಿದೆ’ ಎಂದು ಜೈಶಂಕರ್ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸೌದಿ ಅರೇಬಿಯದಲ್ಲಿರುವ ಭಾರತೀಯ ರಾಯಭಾರ ಕಚೇರಿಯೂ ದಾಳಿಯಲ್ಲಿ ಗಾಯಗೊಂಡಿದ್ದ ಭಾರತೀಯ ಪ್ರಜೆಯೊಬ್ಬರು ಮೃತಪಟ್ಟಿರುವುದನ್ನು ದೃಢಪಡಿಸಿದೆ. ಅಧಿಕಾರಿಗಳು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯ ನೆರವು ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ಯೂಸುಫ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ಶೀಘ್ರವಾಗಿ ರವಾನಿಸಲು ಅಗತ್ಯ ವ್ಯವಸ್ಥೆಗಳನ್ನು ಮಾಡುವುದಾಗಿಯೂ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor