Hassan | ಕಾರು– ಬೈಕ್ ನಡುವೆ ಅಪಘಾತ; ದಂಪತಿ ಮೃತ್ಯು
ಹಾಸನ/ಹುಣಸೂರು, ಫೆ.28 : ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ, ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬೀರನಹಳ್ಳಿ ಗ್ರಾಮದ ನಂಜುಂಡಸ್ವಾಮಿ (52) ಹಾಗೂ ಅವರ ಪತ್ನಿ ನೇತ್ರಾವತಿ (46) ಮೃತರು. ಹಾಸನ ಜಿಲ್ಲೆಯ ರಾಮನಾಥಪುರ ಸಮೀಪದ ಸೋಮಪುರದಲ್ಲಿ ಸಂಬಂಧಿಕರೊಬ್ಬರು ಮೃತಪಟ್ಟ ಹಿನ್ನೆಲೆ ದಂಪತಿ ಬೈಕ್‌ನಲ್ಲಿ ತೆರಳುತ್ತಿದ್ದರು.
ಕೆ.ಆರ್.ನಗರ–ಹಾಸನ ಹೆದ್ದಾರಿಯ ನಾರಾಯಣಪುರದ ಅರ್ಕೇಶ್ವರಸ್ವಾಮಿ ದೇವಾಲಯದ ಬಳಿ ಸಂಚರಿಸುತ್ತಿದ್ದಾಗ, ಹಾಸನ ಕಡೆಯಿಂದ ಅತಿ ವೇಗವಾಗಿ ಬಂದ ಕಾರು ಇವರ ಬೈಕ್‌ಗೆ ನೇರವಾಗಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಢಿಕ್ಕಿಯ ರಭಸಕ್ಕೆ ದಂಪತಿ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆ ಹಾಗೂ ಕೈಕಾಲುಗಳಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.