ಹಳೇಬೀಡು ಪಿಎಸ್‌ಐ ಲೋಕಾಯುಕ್ತ ಬಲೆಗೆ

Update: 2026-08-14 00:33 IST

ಹಾಸನ : ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಮಂಜುನಾಥ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಹಳೇಬೀಡು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾನ್-ಕಾನ್ಫಿಡೆನ್ಶಿಯಲ್ ರಿಪೋರ್ಟ್ (ಎನ್‌ಸಿಆರ್) ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಪಿಎಸ್‌ಐ ಮಂಜುನಾಥ್ ಅವರು ದೂರುದಾರರಿಂದ 1 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ಇಚ್ಛಿಸದ ದೂರುದಾರರು ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಮುಂಗಡವಾಗಿ20 ಸಾವಿರ ರೂ. ಲಂಚದ ಹಣವನ್ನು ಪಡೆಯುತ್ತಿದ್ದ ವೇಳೆ ಪಿಎಸ್‌ಐ ಮಂಜುನಾಥ್ ಅವರನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.ಲೋಕಾಯುಕ್ತ ಎಸ್‌ಪಿ ನಂದಿನಿ ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಶಿಲ್ಪಾ ಹಾಗೂ ಗವಿರಾಜು ಅವರ ನೇತೃತ್ವದ ತಂಡ ಹಳೇಬೀಡು ಪೊಲೀಸ್ ಠಾಣೆಯಲ್ಲೇ ಕಾರ್ಯಾಚರಣೆ ನಡೆಸಿದೆ.

ಪ್ರಸ್ತುತ ಲೋಕಾಯುಕ್ತ ಅಧಿಕಾರಿಗಳು ಠಾಣೆಯಲ್ಲೇ ಮೊಕ್ಕಾಂ ಹೂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದಾರೆ. ಪಿಎಸ್‌ಐ ಮಂಜುನಾಥ್ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಮುಂದುವರಿದಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News