NEET ಅಕ್ರಮ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ; ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

Update: 2026-07-23 17:07 IST

ಹಾಸನ : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಖಂಡಿಸಿ ಎಸ್‌.ಎಫ್‌.ಐ ಮತ್ತು ಡಿ.ವೈ.ಎಫ್.ಐ. ಜಿಲ್ಲಾ ಘಟಕದ ನೇತೃತ್ವದಲ್ಲಿ ಗುರುವಾರ ನಗರದ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿದ್ಯಾರ್ಥಿಗಳು ಹಾಗೂ ಸಂಘಟನೆಯ ಕಾರ್ಯಕರ್ತರು ಧರಣಿ ನಡೆಸಿ, ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ನೀಟ್‌ನಂತಹ ಮಹತ್ವದ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಇದರಿಂದ ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆ ಕುಸಿದಿದ್ದು, ವಿದ್ಯಾರ್ಥಿಗಳಲ್ಲಿ ಅನಿಶ್ಚಿತತೆ ಮತ್ತು ಆತಂಕ ಸೃಷ್ಟಿಯಾಗಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್‌.ಎಫ್‌.ಐ ಜಿಲ್ಲಾ ಕಾರ್ಯದರ್ಶಿ ರಮೇಶ್, ನೀಟ್ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಸಂಪೂರ್ಣ ನೈತಿಕ ಹೊಣೆಯನ್ನು ಕೇಂದ್ರ ಸರಕಾರ ಹೊತ್ತುಕೊಳ್ಳಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ವಿದ್ಯಾರ್ಥಿಗಳು ಮತ್ತು ಪೋಷಕರ ಕ್ಷಮೆ ಕೇಳಬೇಕು. ದೇಶದ ಉನ್ನತ ಶಿಕ್ಷಣ ಪ್ರವೇಶ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಲು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಅಥವಾ ಸ್ವತಂತ್ರ ಸಂಸ್ಥೆಯ ಮೂಲಕ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ನೀಟ್ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲ ವ್ಯಕ್ತಿಗಳು, ಅಧಿಕಾರಿಗಳು ಹಾಗೂ ಮಧ್ಯವರ್ತಿಗಳನ್ನು ಗುರುತಿಸಿ ಕಾನೂನು ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಯಾವುದೇ ಪ್ರಭಾವಕ್ಕೆ ಮಣಿಯದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಾಗ ಮಾತ್ರ ವಿದ್ಯಾರ್ಥಿಗಳಲ್ಲಿ ವಿಶ್ವಾಸ ಮೂಡಲಿದೆ ಎಂದು ಹೇಳಿದರು. ಕೇಂದ್ರ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಹಾಗೂ ಶಿಕ್ಷಣ ಸಚಿವರು ರಾಜೀನಾಮೆ ನೀಡದಿದ್ದರೆ, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟಗಳನ್ನು ಸಂಘಟಿಸಲಾಗುವುದು ಎಂದು ಎಸ್‌.ಎಫ್‌.ಐ ಎಚ್ಚರಿಕೆ ನೀಡಿತು.

ಬಳಿಕ ಪ್ರತಿಭಟನಾಕಾರರು ಜಿಲ್ಲಾಡಳಿತದ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿ, ನೀಟ್ ಅಕ್ರಮದ ಸಮಗ್ರ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು, ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕ ಮತ್ತು ವಿಶ್ವಾಸಾರ್ಹವಾಗಿಸಲು ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಸ್‌.ಎಫ್‌.ಐ ಮತ್ತು ಡಿ.ವೈ.ಎಫ್.ಐ. ಮುಖಂಡರಾದ ಎಂ.ಜಿ. ಪೃಥ್ವಿ, ಧರ್ಮೇಶ್, ಕೆ.ಪಿ.ಆರ್.ಎಸ್. ಜಿಲ್ಲಾಧ್ಯಕ್ಷ ಹೆಚ್.ಆರ್. ನವೀನ್ ಕುಮಾರ್, ಅರವಿಂದ್, ಬಾಳೆಹಣ್ಣು ವರ್ತಕರ ಸಂಘದ ಅಧ್ಯಕ್ಷ ಸಮೀರ್, ದಲಿತ ಮುಖಂಡ ಕೃಷ್ಣದಾಸ್, ಶಿವಣ್ಣ ಹಾಗೂ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ವಿವಿಧ ಕಾಲೇಜುಗಳ ಯುವಜನರು ಭಾಗವಹಿಸಿ, ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ ಕಾಪಾಡುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News