ಸಕಲೇಶಪುರಕ್ಕೆ ವಂದೇ ಭಾರತ್ ರೈಲು; ಬಹುದಿನಗಳ ಕನಸು ನನಸು: ಸಿಮೆಂಟ್ ಮಂಜು
ಸಕಲೇಶಪುರ : ಬೆಂಗಳೂರು- ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋ ಗಿಕ ಸಂಚಾರದ ಹಿನ್ನೆಲೆಯಲ್ಲಿ ರೈಲು ಸಕಲೇಶಪುರಕ್ಕೆ ಆಗಮಿಸಿರುವುದು ಈ ಭಾಗದ ನಾಗರಿಕರಿಗೆ ಸುದಿನವಾಗಿದೆ. ಬಹುದಿನಗಳ ಬೇಡಿಕೆಯಾಗಿದ್ದ ವಂದೇ ಭಾರತ್ ರೈಲು ಸೌಲಭ್ಯ ಇದೀಗ ಸಾಕಾರಗೊಳ್ಳುವ ಹಂತ ತಲುಪಿರುವುದು ಸಂತಸ ತಂದಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದ್ದಾರೆ.
ಸಕಲೇಶಪುರ ರೈಲು ನಿಲ್ದಾಣಕ್ಕೆ ಬುಧವಾರ ಬೆಳಗ್ಗೆ ಆಗಮಿಸಿದ ವಂದೇ ಭಾರತ್ ರೈಲಿಗೆ ಶಾಸಕ ಸಿಮೆಂಟ್ ಮಂಜು ಪೂಜೆ ನೆರವೇರಿಸಿ ಸ್ವಾಗತಿಸಿದರು. ಬಳಿಕ ಮಾತನಾಡಿ, ತಾನು ಶಾಸಕನಾದ ಬಳಿಕ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಹಾಗೂ ಇಂಟರ್‌ಸಿಟಿ ರೈಲು ಸಂಚಾರ ಆರಂಭಿಸುವಂತೆ ಮನವಿ ಮಾಡಿದ್ದಾಗಿ ತಿಳಿಸಿದರು.
ಸಕಲೇಶಪುರದವರೆಗೆ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಪ್ರಾಯೋಗಿಕ ಸಂಚಾರ ಯಶಸ್ವಿಯಾದ ಬಳಿಕ ಕೆಲವೇ ದಿನಗಳಲ್ಲಿ ಸಾರ್ವಜನಿಕರಿಗೆ ವಂದೇ ಭಾರತ್ ರೈಲು ಸೇವೆ ಲಭ್ಯವಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ವಂದೇ ಭಾರತ್ ರೈಲಿನಲ್ಲಿ ಪ್ರಸ್ತುತ 20 ಬೋಗಿಗಳಿದ್ದು, ಒಂದೇ ಬಾರಿ ಸುಮಾರು 1,080 ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ. ಅತ್ಯುತ್ತಮ ಆಸನ ವ್ಯವಸ್ಥೆ ಹಾಗೂ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಈ ರೈಲಿನಲ್ಲಿ ಪ್ರಯಾಣಿಸುವಾಗ ವಿಮಾನದಲ್ಲಿ ಪ್ರಯಾಣಿಸಿದ ಅನುಭವವಾಗುತ್ತದೆ. ಮುಂದಿನ ದಿನಗಳಲ್ಲಿ ಸ್ಲೀಪರ್ ಕೋಚ್ ಸೇರಿದಂತೆ ಇನ್ನಷ್ಟು ಸೌಲಭ್ಯಗಳಿರುವ ರೈಲುಗಳ ಸಂಚಾರಕ್ಕೂ ಅವಕಾಶ ದೊರೆಯುವ ನಿರೀಕ್ಷೆಯಿದೆ ಎಂದರು. ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಬಿಜೆಪಿಯ ಪದಾಧಿಕಾರಿಗಳು ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.