ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಹಾವೇರಿ : ಕನಕದಾಸರ 539ನೇ ಜಯಂತ್ಯೋತ್ಸವದ ಅಂಗವಾಗಿ ನವೆಂಬರ್ 27ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾವೇರಿ ನಗರಕ್ಕೆ ಆಗಮಿಸಲಿದ್ದು, ನಗರದ ಕಾಗಿನೆಲೆ ವೃತ್ತದಲ್ಲಿ ನಿರ್ಮಿಸಿರುವ 8.5 ಅಡಿ ಎತ್ತರದ ಕನಕದಾಸರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ನವೆಂಬರ್ 26 ಮತ್ತು 27ರಂದು ಅದ್ದೂರಿಯಾಗಿ ಜಯಂತ್ಯೋತ್ಸವ ಹಾಗೂ ಜಾತ್ರಾ ಕಾರ್ಯಕ್ರಮಗಳು ನಡೆಯಲಿವೆ. ಕಾಗಿನೆಲೆ ಮತ್ತು ಬಾಡ ಗ್ರಾಮಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 34 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆಂದು ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರು ಹೇಳಿದರು.

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಬೇಕಾಗಿತ್ತು. ಆದರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದರು.

ನ. 27ರಂದು ಬೆಳಿಗ್ಗೆ 10 ಗಂಟೆಗೆ ಹಾವೇರಿಯ ಕೆಎಲ್‌ಇ ಕಾಲೇಜು ಆವರಣದ ಹೆಲಿಪ್ಯಾಡ್‌ಗೆ ಆಗಮಿಸಲಿರುವ ಡಿ.ಕೆ. ಶಿವಕುಮಾರ್, ಕಾಗಿನೆಲೆ ವೃತ್ತದಲ್ಲಿ ಕನಕದಾಸರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಬಳಿಕ ಕಾಗಿನೆಲೆ ಗ್ರಾಮದ ಮಠಕ್ಕೆ ಭೇಟಿ ನೀಡಿ, ಜಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ನಾಗರಾಜ್, ಅಶೋಕ ಬಣಕಾರ್, ಗಿರೀಶ್ ಹಾಗೂ ಎಸ್.ಎಫ್.ಎನ್. ಗಾಜಿಗೌಡ್ರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮದರಸಾಬ್‌ ಹಾವೇರಿ/ವಾರ್ತಾಭಾರತಿ

contributor