"ಕಬ್ಬಿಗೆ ಪ್ರತಿ ಟನ್‌ಗೆ ₹3,500 ದರ ನಿಗದಿಯಾಗುವವರೆಗೆ ಕದಲುವುದಿಲ್ಲ": ಹಾವೇರಿ ಡಿಸಿ ಕಚೇರಿಯಲ್ಲಿ ತಡರಾತ್ರಿಯವರೆಗೂ ರೈತರ ಪ್ರತಿಭಟನೆ
ಹಾವೇರಿ. ಕಬ್ಬಿಗೆ ಪ್ರತಿ ಟನ್‌ಗೆ ₹3,500 ದರ ನಿಗದಿಪಡಿಸುವಂತೆ ಆಗ್ರಹಿಸಿ ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರ ರೈತರು ನಡೆಸುತ್ತಿರುವ ಸಭೆ ತಡರಾತ್ರಿಯವರೆಗೂ ಮುಂದುವರಿದಿದೆ. ಬೇಡಿಕೆ ಈಡೇರುವವರೆಗೂ ಸಭೆಯಿಂದ ಹೊರಹೋಗುವುದಿಲ್ಲ ಎಂದು ರೈತ ಮುಖಂಡರು ಪಟ್ಟು ಹಿಡಿದಿದ್ದಾರೆ.
ಹಾವೇರಿ ನಗರದ ದೇವಗಿರಿ ಸಮೀಪದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಜವಳಿ ಮತ್ತು ಸಕ್ಕರೆ ಸಚಿವ ರುದ್ರಪ್ಪ ಲಮಾಣಿ, ಹಾವೇರಿ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರು ಭಾಗವಹಿಸಿದ್ದಾರೆ. ಕಬ್ಬಿಗೆ ಪ್ರತಿ ಟನ್‌ಗೆ ₹3,500 ದರ ನಿಗದಿಯಾಗುವವರೆಗೂ ಅಧಿಕಾರಿಗಳು ಮತ್ತು ಕಾರ್ಖಾನೆ ಮಾಲಕರು ಸಭೆಯಿಂದ ಹೊರಹೋಗಲು ಅವಕಾಶ ನೀಡುವುದಿಲ್ಲ ಎಂದು ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "3100, 3200 ರೂಪಾಯಿ ಎಂದು ಹೇಳುತ್ತಾ ಕೇವಲ 50 ಅಥವಾ 100 ರೂಪಾಯಿ ಹೆಚ್ಚಳ ಮಾಡುತ್ತಿದ್ದಾರೆ. ಕಬ್ಬಿನ ಬೆಲೆ ನಿಗದಿಯನ್ನು ತರಕಾರಿ ಮಾರುಕಟ್ಟೆಯ ರೀತಿಯಲ್ಲಿ ನಡೆಸಲಾಗುತ್ತಿದೆ. ರೈತರ ಶ್ರಮಕ್ಕೆ ತಕ್ಕ ನ್ಯಾಯಯುತ ಬೆಲೆ ನೀಡುವ ಬದಲು ಚೌಕಾಸಿ ಮಾಡಲಾಗುತ್ತಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಬ್ಬಿಗೆ ₹3,500 ದರ ನಿಗದಿಪಡಿಸುವವರೆಗೂ ಯಾವುದೇ ಕಾರಣಕ್ಕೂ ಸ್ಥಳದಿಂದ ತೆರಳುವುದಿಲ್ಲ ಎಂದು ಸುಮಾರು ನೂರು ರೈತರು ಜಿಲ್ಲಾಧಿಕಾರಿ ಕಚೇರಿಯಲ್ಲೇ ಮಲಗಿ ಪ್ರತಿಭಟನೆ ಮುಂದುವರಿಸಿದ್ದಾರೆ. ರೈತರ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಮುಖಂಡರು ಸ್ಪಷ್ಟಪಡಿಸಿದ್ದಾರೆ.