ಹಾವೇರಿ: ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯಲ್ಲಿ ನಕಲಿ ಮತದಾನ ನಡೆದಿದೆ ಎಂದು ಆರೋಪಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಹಳೇ ಪಿ.ಬಿ. ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹಾಗೂ ಮತಗಟ್ಟೆ ಅಧಿಕಾರಿಗಳ ಕುಮ್ಮಕ್ಕಿನಿಂದ ನಕಲಿ ಮತದಾನ ನಡೆದಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸಚಿವರು ರಾಜೀನಾಮೆ ನೀಡಬೇಕು ಮತ್ತು ಮತಗಟ್ಟೆಯ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಅವರ ಪತ್ನಿ ಆಶಾ ಪಾಟೀಲ ಅವರ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶಿಲ್ಪಾ ಬಡಮ್ಮನವರ ನಕಲಿ ಮತದಾನ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಪ್ರವೇಶ ದ್ವಾರದ ಬಳಿಯೇ ತಡೆದು ನಿಲ್ಲಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಮುತ್ತಿಗೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಕಾಂಗ್ರೆಸ್ ಕಚೇರಿಯೊಳಗೆ ಕಲ್ಲು ಎಸೆದಿದ್ದಾರೆ. ಇದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಬಳಿಕ ಮುಖಂಡರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಪ್ರಸ್ತುತ ಕಾಂಗ್ರೆಸ್ ಕಚೇರಿಯ ಎದುರು ಬಿಜೆಪಿ ಕಾರ್ಯಕರ್ತರು ಸಭೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor