Haveri | ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ : 8ಕ್ಕೂ ಹೆಚ್ಚು ಮಂದಿಗೆ ಗಾಯ, 5 ಮಂದಿ ಪೊಲೀಸ್ ವಶಕ್ಕೆ
ಹಾವೇರಿ : ಬಂಡಿದಾರಿ ವಿವಾದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಘರ್ಷಣೆ ಮಾರಾಮಾರಿಗೆ ತಿರುಗಿ ಹಲವರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬ್ಯಾಗವಾದಿ ಗ್ರಾಮದಲ್ಲಿ ನಡೆದಿದೆ.
ಮಾಲತೇಶ ನಿಂಗಪ್ಪ ಕಾಮೆರ ಅವರ 17 ಎಕರೆ ಜಮೀನಿನಲ್ಲಿರುವ 20 ಅಡಿ ಬಂಡಿದಾರಿಯನ್ನು ಅತಿಕ್ರಮಿಸಲಾಗಿದೆ ಎಂದು ಆರೋಪಿಸಿ, ಅದನ್ನು ತೆರವುಗೊಳಿಸುವಂತೆ ಉದ್ದನಕಾಲು ಕುಟುಂಬದವರು ತಹಶೀಲ್ದಾರ್ ಅವರಿಗೆ ಅರ್ಜಿ ಸಲ್ಲಿಸಿದ್ದರು. ಇದೇ ವಿಚಾರವಾಗಿ ಉಭಯ ಕುಟುಂಬಗಳ ನಡುವೆ ಉದ್ವಿಗ್ನತೆ ಉಂಟಾಗಿ ಗಲಾಟೆ ನಡೆದಿದೆ ಎನ್ನಲಾಗಿದೆ.
ಸುಮಾರು 15ರಿಂದ 20 ಮಂದಿ ಪರಸ್ಪರ ಬಡಿಗೆ, ಕುಡುಗೋಲುಗಳಿಂದ ಹಲ್ಲೆ ನಡೆಸಿದ್ದು, ಟಿಟಿ ವಾಹನ ಹಾಯಿಸಿ ಕೊಲೆ ಯತ್ನ ನಡೆಸಿದ ಆರೋಪವೂ ಕೇಳಿಬಂದಿದೆ.
ಘರ್ಷಣೆಯಲ್ಲಿ 7ರಿಂದ 8 ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆ, ಕಿಮ್ಸ್ ಹುಬ್ಬಳ್ಳಿ ಹಾಗೂ ವೀರಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 5 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ನಿರಂತರ ಗಸ್ತು ಕೈಗೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹೆಚ್ಚುವರಿ ಎಸ್‌ಪಿ ಹಾವೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಈ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.