ಹಾವೇರಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಲಕ್ಸುರಿ ಬಸ್ ರಾಷ್ಟ್ರೀಯ ಹೆದ್ದಾರಿ 68ರಲ್ಲಿ ಪಲ್ಟಿಯಾಗಿ ಏಳು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯಲ್ಲೇ ಉರುಳಿಬಿದ್ದಿದ್ದು, ಚಾಲಕ ನಿದ್ರೆಗೆ ಜಾರಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ಪರಿಣಾಮ ಬಸ್‌ನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ವೇಳೆ ಓರ್ವ ಪ್ರಯಾಣಿಕನ ಕಾಲು ಬಸ್‌ನ ಅಡಿಯಲ್ಲಿ ಸಿಲುಕಿಕೊಂಡು ಕೆಲಕಾಲ ಪರದಾಡುವಂತಾಯಿತು. ಸ್ಥಳೀಯರು ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸಿಬ್ಬಂದಿ ಹರಸಾಹಸ ಪಟ್ಟು ಆತನನ್ನು ಹೊರತೆಗೆದಿದ್ದಾರೆ.

ಗಾಯಾಳುಗಳನ್ನು ತಕ್ಷಣ ಹಾವೇರಿ ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮದರಸಾಬ್‌ ಹಾವೇರಿ/ವಾರ್ತಾಭಾರತಿ

contributor