ಹಾವೇರಿ : ಜಿಲ್ಲೆಯ ಬ್ಯಾಡಗಿ ಪಟ್ಟಣದ ಟೀಚರ್ಸ್ ಕಾಲೋನಿಯಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ನಿವೃತ್ತ ಶಿಕ್ಷಕ ಶಿವನಾಯಕ ಅವರ ಮನೆಗೆ ನುಗ್ಗಿರುವ ಕಳ್ಳರ ತಂಡ ಬೆಲೆಬಾಳುವ ವಸ್ತುಗಳಿಗಾಗಿ ಹುಡುಕಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಕಳೆದ ನಾಲ್ಕು ದಿನಗಳಿಂದ ತಮ್ಮ ವೈಯಕ್ತಿಕ ಕಾರ್ಯದ ನಿಮಿತ್ತ ಶಿವಮೊಗ್ಗಕ್ಕೆ ತೆರಳಿದ್ದ ಶಿವನಾಯಕ ಅವರು ಮನೆಯಲ್ಲಿ ಇಲ್ಲದಿರುವುದನ್ನು ಗಮನಿಸಿದ ಕಳ್ಳರು, ಇದೇ ಅವಕಾಶವನ್ನು ಬಳಸಿಕೊಂಡು ಮನೆಯ ಮುಂಭಾಗದ ಬಾಗಿಲು ಒಡೆದು ಒಳನುಗ್ಗಿದ್ದಾರೆ. ಬಳಿಕ ಮನೆಯಲ್ಲಿದ್ದ ಬೀರುಗಳನ್ನು ಒಡೆದು, ಚಿನ್ನಾಭರಣ ಹಾಗೂ ನಗದು ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳು ಇಲ್ಲದ ಕಾರಣ ಕಳ್ಳರು ಬರಿಗೈಯಲ್ಲಿ ಹಿಂದಿರುಗಿದ್ದಾರೆ ಎನ್ನಲಾಗಿದೆ.

ದೇವಸ್ಥಾನದ ಹುಂಡಿ ಕಳ್ಳತನಕ್ಕೂ ಯತ್ನ!

ಇದೇ ಮನೆಯ ಸಮೀಪದಲ್ಲಿರುವ ವೆಂಕಟೇಶ್ವರ ದೇವಸ್ಥಾನದ ಹುಂಡಿಯನ್ನು ಕೆಲವು ತಿಂಗಳ ಹಿಂದೆಯಷ್ಟೇ ಕಳವು ಮಾಡಲು ಪ್ರಯತ್ನಿಸಿದ್ದರು ಎನ್ನಲಾಗಿದೆ. ದೇವಸ್ಥಾನದ ಹಿಂಭಾಗದಲ್ಲಿಯೇ ಶಿವನಾಯಕ ಅವರ ಮನೆ ಇದ್ದು, ಇದೀಗ ಅದೇ ಪ್ರದೇಶದಲ್ಲಿ ಮತ್ತೆ ಕಳ್ಳತನ ನಡೆದಿರುವುದು ಸ್ಥಳೀಯರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಕಳ್ಳರ ಹಾವಳಿಗೆ ಕಡಿವಾಣ ಯಾವಾಗ?

ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಳ್ಳರ ಪತ್ತೆ ಹಾಗೂ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವಲ್ಲಿ ಪೊಲೀಸ್ ಇಲಾಖೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಪಟ್ಟಣದ ಛತ್ರ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಕಳ್ಳತನ ನಡೆಸಿದ್ದ ಕಳ್ಳರು ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದರು. ಈ ಘಟನೆ ಬೆನ್ನಲ್ಲೇ ಇದೀಗ ಟೀಚರ್ಸ್ ಕಾಲೋನಿಯಲ್ಲಿ ಮತ್ತೊಂದು ಕಳ್ಳತನ ಪ್ರಕರಣ ನಡೆದಿರುವುದು ಪಟ್ಟಣದ ಜನತೆಯನ್ನು ಬೆಚ್ಚಿಬೀಳಿಸಿದೆ. ನಿರಂತರವಾಗಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಲು ರಾತ್ರಿ ಪೊಲೀಸ್ ಗಸ್ತು ಹೆಚ್ಚಿಸುವುದು, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ವಹಿಸುವುದು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಕಣ್ಗಾವಲು ಬಲಪಡಿಸುವುದು ಅಗತ್ಯವಾಗಿದೆ. ಇಲ್ಲವಾದರೆ ಮನೆಗೆ ಬೀಗ ಹಾಕಿ ಹೊರಹೋಗಲೂ ಸಾರ್ವಜನಿಕರು ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor