×
Ad

ಕೋವಿಡ್ ಸೋಂಕು ಇದ್ದರೆ ಏಳು ದಿನ ಹೋಮ್ ಐಸೊಲೇಷನ್ ಕಡ್ಡಾಯ: ಸಚಿವ ದಿನೇಶ್ ಗುಂಡೂರಾವ್

Update: 2023-12-26 20:19 IST

ಬೆಂಗಳೂರು: ಕೋವಿಡ್ ಪಾಸಿಟಿವ್ ಬಂದವರಿಗೆ ಏಳು ದಿನ ಹೋಮ್ ಐಸೊಲೇಷನ್ ಕಡ್ಡಾಯವಾಗಿದ್ದು, ಸೋಂಕಿತರ ಮನೆಗಳಿಗೆ ಸರಕಾರಿ ವೈದ್ಯರು ಭೇಟಿ ನೀಡಿ ಹೆಚ್ಚಿನ ನಿಗಾ ವಹಿಸಬೇಕು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳಲ್ಲಿ ವೇಗವಾಗಿ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜ್ವರ, ನೆಗಡಿ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಾರದು. ಮನೆಯಲ್ಲೇ ಸೂಕ್ತ ಆರೈಕೆಗೆ ಮಾರ್ಗಸೂಚಿ ಹೊರಡಿಸಬೇಕು ಎಂದು ಹೇಳಿದರು.

ಕೋವಿಡ್ ಪಾಸಿಟಿವ್ ಆದವರು ಕಡ್ಡಾಯವಾಗಿ 7 ದಿನ ಹೋಮ್ ಐಸೊಲೇಷನ್ʼನಲ್ಲಿ ಇರಬೇಕು. ʻಹೋಮ್ ಐಸೊಲೇಷನ್ʼನಲ್ಲಿ ಇರುವ, ಸರ್ಕಾರಿ ಅಥವಾ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ 7 ದಿನಗಳ ರಜೆ ಕೊಡಬೇಕು. ಐಸಿಯು ಅಥವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಬಾಧಿತರಿಗೆ ಸಂಪೂರ್ಣ ಗುಣಮುಖರಾಗುವರೆಗೆ ರಜೆ ಕೊಡಿಸುವ ಕುರಿತು ಸರಕಾರದಿಂದ ಮಾರ್ಗಸೂಚಿ ಹೊರಡಿಸಬೇಕು ಎಂದು ಹೇಳಿದರು.

ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್ ರಚನೆ ಮಾಡಬೇಕು. ಇಲ್ಲಿನ ವಿಕ್ಟೋರಿಯಾ, ಮತ್ತು ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್ ಮಾಡಬೇಕು. ಐಸಿಯು ಬೆಡ್, ಹಾಗೂ ಐಸೊಲೇಷನ್ ಬೆಡ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಕೋವಿಡ್ 436 ಸಕ್ರಿಯ ಪ್ರಕರಣಗಳಿವೆ. ಹೋಮ್ ಐಸೊಲೇಷನ್ ನಲ್ಲಿರುವ 400 ಕೋವಿಡ್ ಸೋಂಕಿತರ ಮನೆಗಳಿಗೆ ವೈದ್ಯರು ಭೇಟಿ ನೀಡಿ ನಿಗಾ ವಹಿಸಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲಿ ಕೋವಿಡ್ ರೋಗಲಕ್ಷಣಗಳಿದ್ದರೆ, ಕಡ್ಡಾಯವಾಗಿ ಟೆಸ್ಟಿಂಗ್ ನಡೆಸಬೇಕು. ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಬೇಕು.

ಇತರೆ ಕಾಯಿಲೆ ಹೊಂದಿದವರಿಗೆ ಆದ್ಯತೆಯ ಮೇರೆಗೆ ವ್ಯಾಕ್ಸಿನ್ ನೀಡಬೇಕು. ಹೀಗಾಗಿ ಕೇಂದ್ರ ಸರಕಾರದಿಂದ 30 ಸಾವಿರ ಲಸಿಕೆ ಪಡೆಯಬೇಕಾಗಿದೆ. ಆರೋಗ್ಯ ಸಿಬ್ಬಂದಿಗಳಿಗೆ ಸುರಕ್ಷತೆಯ ದೃಷ್ಟಿಯಿಂದ ಫ್ಲೂ ವ್ಯಾಕ್ಸಿನ್ ನೀಡಲಾಗುವುದು. ಹೊಸ ವರ್ಷಾಚರಣೆಗೆ ಸೇರಿದಂತೆ ಯಾವುದೇ ಕಾರ್ಯಕ್ರಮ ಅಥವಾ ಜನರ ಓಡಾಟಕ್ಕೆ ಸದ್ಯ ಯಾವುದೇ ನಿರ್ಬಂಧ ಹೇರುವುದಿಲ್ಲ. ಆದರೆ ಜನನಿಬಿಡ ಪ್ರದೇಶದಲ್ಲಿ ಮಾಸ್ಕ್ ಧರಿಸಿ ಕೋವಿಡ್ ನಿಯಮಾವಳಿ ಪಾಲನೆ ಮಾಡಬೇಕು ಎಂದು ತಿಳಿಸಿದರು.

ಕೋವಿಡ್ ಶಂಕೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡುವ ಎಲ್ಲರನ್ನು ಸಿ.ಟಿ ಸ್ಕ್ಯಾನಿಂಗ್ ಗೆ ಒಳಪಡಿಸುವುದು ನಿಷೇಧ ಮಾಡಲಾಗಿದೆ. ಕೋವಿಡ್ ಪಾಸಿಟಿವ್ ಬಂದವರನ್ನು ಮಾತ್ರ ಸಿ.ಟಿ ಸ್ಕ್ಯಾನಿಂಗ್‍ಗೆ ಒಳಪಡಿಸಬಹುದು. ಇಂದಿನಿಂದ ಪ್ರತಿ ನಿತ್ಯ 5 ಸಾವಿರ ಕೋವಿಡ್ ಟೆಸ್ಟಿಂಗ್ ಮಾಡಲಾಗುವುದು. ನಾಲ್ಕು ಮೊಬೈಲ್ ಆಕ್ಸಿಜನ್ ಕಂಟೆಂಡರ್ ಗಳನ್ನು ಖರೀದಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೀಲ್, ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೇರಿದಂತೆ, ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಟಿಎಸಿ ಸಮಿತಿ ಅಧ್ಯಕ್ಷ ಡಾ. ರವಿ ಹಾಗೂ ಹಿರಿಯ ಆರೋಗ್ಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News