ಪಾಕಿಸ್ತಾನ | ಗಡಿಭದ್ರತಾ ಪಡೆಯ ಮೇಲೆ ಉಗ್ರರ ದಾಳಿ; 18 ಯೋಧರು ಮೃತ್ಯು
ಸಾಂದರ್ಭಿಕ ಚಿತ್ರ / Photo:NDTV
ಪೇಷಾವರ: ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ ಪ್ರಾಂತದಲ್ಲಿ ಅರೆಸೇನಾ ಪಡೆ(ಗಡಿಭದ್ರತಾ ಪಡೆ)ಯ ವಾಹನಗಳ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ 18 ಯೋಧರು ಮೃತಪಟ್ಟಿದ್ದು ಇತರ ಮೂವರು ಗಂಭೀರವಾಗಿ ಗಾಯಗೊಂಡಿರುವುದಾಗಿ ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಎಎಫ್‍ಪಿ ಸುದ್ದಿಸಂಸ್ಥೆ ಶನಿವಾರ ವರದಿ ಮಾಡಿದೆ.
ಮಂಗೋಚಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿರಾಯುಧರಾಗಿದ್ದ ಗಡಿಭದ್ರತಾ ಪಡೆಯ ಯೋಧರು ಪ್ರಯಾಣಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿದ ಸುಮಾರು 80ರಷ್ಟು ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ದಾಳಿಯಲ್ಲಿ 18 ಯೋಧರು ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಾವುದೇ ಸಂಘಟನೆ ದಾಳಿಯ ಹೊಣೆ ವಹಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬಲೂಚಿಸ್ತಾನ ಪ್ರಾಂತದಲ್ಲಿ ಬಂಡುಕೋರ ಚಟುವಟಿಕೆ ನಡೆಸುತ್ತಿರುವ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ(ಬಿಎಲ್‍ಎ) ಇತ್ತೀಚಿನ ದಿನಗಳಲ್ಲಿ ಭದ್ರತಾ ಪಡೆಗಳ ಮೇಲಿನ ಮಾರಣಾಂತಿಕ ದಾಳಿಯನ್ನು ತೀವ್ರಗೊಳಿಸಿದೆ. ಜತೆಗೆ, ಪ್ರಾಕೃತಿಕ ಸಂಪನ್ಮೂಲಗಳಿಂದ ಸಮೃದ್ಧವಾಗಿರುವ ಪ್ರಾಂತದಲ್ಲಿ ಚೀನಾ ಮೂಲದ ಸಂಸ್ಥೆಗಳು ಕಾರ್ಯ ನಿರ್ವಹಿಸುವುದನ್ನು ತೀವ್ರವಾಗಿ ವಿರೋಧಿಸುತ್ತಿದೆ.