ಅಮೆರಿಕ | ಪ್ರತ್ಯೇಕ ಗುಂಡಿನ ದಾಳಿಯಲ್ಲಿ 10 ಮಂದಿ ಸಾವು; 32 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ (PTI)
ನ್ಯೂಯಾರ್ಕ್, ಅ.12: ಅಮೆರಿಕಾದಲ್ಲಿ ಶನಿವಾರ ಮತ್ತು ರವಿವಾರ ನಡೆದ ಎರಡು ಪ್ರತ್ಯೇಕ ಗುಂಡಿನ ದಾಳಿಗಳಲ್ಲಿ ಒಟ್ಟು 10 ಮಂದಿ ಸಾವನ್ನಪ್ಪಿದ್ದು ಕನಿಷ್ಠ 32 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಮಿಸ್ಸಿಸಿಪ್ಪಿ ರಾಜ್ಯದ ಲೆಲ್ಯಾಂಡ್ನಲ್ಲಿ ಶನಿವಾರ ರಾತ್ರಿ ಫುಟ್ಬಾಲ್ ಪಂದ್ಯದಲ್ಲಿ ಲೆಲ್ಯಾಂಡ್ ಹೈಸ್ಕೂಲ್ ಗೆದ್ದ ಬಳಿಕ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಗುಂಪಿನ ಮೇಲೆ ಗುಂಡಿನ ದಾಳಿ ನಡೆದಿದ್ದು ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಾಯಗೊಂಡಿದ್ದ 14 ಮಂದಿಯಲ್ಲಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ 18 ವರ್ಷದ ಯುವಕ ಗುಂಡಿನ ದಾಳಿ ನಡೆಸಿದ್ದು ಸ್ಥಳದಲ್ಲಿದ್ದ ಸಿಸಿಟಿವಿಯ ದೃಶ್ಯಾವಳಿಯನ್ನು ಪರಿಶೀಲಿಸಿ ಆತನ ಪತ್ತೆಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರವಿವಾರ ದಕ್ಷಿಣ ಕ್ಯರೊಲಿನಾದ ಬಾರ್ ನಲ್ಲಿ ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 4 ಮಂದಿ ಸಾವನ್ನಪ್ಪಿದ್ದು ಇತರ 20 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಬಾರ್ ನಲ್ಲಿ ನಡೆದ ವಾಗ್ಯುದ್ದದ ಬಳಿಕ ಗುಂಡಿನ ದಾಳಿ ನಡೆದಿದ್ದು ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಪಿ ಸುದ್ದಿಸಂಸ್ಥೆ ವರದಿ ಮಾಡಿದೆ.