ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಮೃತ್ಯು; 63 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ - Photo : PTI
ಕುವೈತ್: ಕುವೈತ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮೇಲೆ ಬುಧವಾರ ಇರಾನ್ ನಡೆಸಿದ ಡ್ರೋನ್ ಹಾಗೂ ಕ್ಷಿಪಣಿ ದಾಳಿಯಲ್ಲಿ 63 ಮಂದಿ ಗಾಯಗೊಂಡಿದ್ದು, ಭಾರತೀಯ ನಾಗರಿಕನೊಬ್ಬ ಮೃತಪಟ್ಟಿದ್ದಾರೆ ಎಂದು ಕುವೈತ್ ಆರೋಗ್ಯ ಸಚಿವಾಲಯ ಹಾಗೂ ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿವೆ.
ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಏಳು ಮಂದಿಗೆ ತುರ್ತು ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ದಾಳಿಯಿಂದ ವಿಮಾನ ನಿಲ್ದಾಣದ ಟರ್ಮಿನಲ್‌ಗೆ ಹಾನಿಯಾಗಿದ್ದು, ಪ್ರಮುಖ ಸೌಲಭ್ಯಗಳು ಹಾಗೂ ರಾಜತಾಂತ್ರಿಕ ಕಾರ್ಯಾಚರಣೆಗಳ ಮೇಲೂ ಪರಿಣಾಮ ಬೀರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯ ಬಳಿಕ ತುರ್ತು ಸೇವಾ ಸಿಬ್ಬಂದಿ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಭಾರತೀಯ ನಾಗರಿಕ ಮೃತಪಟ್ಟ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಭಾರತೀಯ ರಾಯಭಾರ ಕಚೇರಿ, ‘ಮೃತರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ. ಗಾಯಗೊಂಡವರು ಹಾಗೂ ಕುಟುಂಬಕ್ಕೆ ಅಗತ್ಯವಿರುವ ಎಲ್ಲ ನೆರವು ಒದಗಿಸಲು ಕುವೈತ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ’ ಎಂದು ತಿಳಿಸಿದೆ.
ದಾಳಿಯ ಬೆನ್ನಲ್ಲೇ ಕುವೈತ್ ಸರ್ಕಾರ ವಿಮಾನ ನಿಲ್ದಾಣದ ತುರ್ತು ಕಾರ್ಯಾಚರಣೆ ಯೋಜನೆಯನ್ನು ಜಾರಿಗೆ ತಂದಿದ್ದು, ಎಲ್ಲಾ ಆಗಮನ ಮತ್ತು ನಿರ್ಗಮನ ವಿಮಾನ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಒಳಬರುವ ವಿಮಾನಗಳನ್ನು ಇತರೆ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ. ಭದ್ರತಾ ಮತ್ತು ಸುರಕ್ಷತಾ ಪರಿಶೀಲನೆಗಳು ಪೂರ್ಣಗೊಳ್ಳುವವರೆಗೆ ಕಾರ್ಯಾಚರಣೆಗಳನ್ನು ಪುನರಾರಂಭಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದರ ಪರಿಣಾಮವಾಗಿ ಇಂಡಿಗೋ, ಕುವೈತ್ ಏರ್‌ವೇಸ್ ಸೇರಿದಂತೆ ಹಲವು ವಿಮಾನಯಾನ ಸಂಸ್ಥೆಗಳು ತಮ್ಮ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ.
ಈ ಮಧ್ಯೆ, ಅಮೆರಿಕ ಮತ್ತು ಇಸ್ರೇಲ್ ಜತೆಗಿನ ಸಂಘರ್ಷದ ಹಿನ್ನೆಲೆಯಲ್ಲಿ ಕದನ ವಿರಾಮ ವಿಸ್ತರಣೆ ಕುರಿತ ಮಾತುಕತೆಗಳನ್ನು ಮಧ್ಯವರ್ತಿಗಳೊಂದಿಗೆ ಸ್ಥಗಿತಗೊಳಿಸಲಾಗಿದೆ ಎಂದು ಇರಾನ್‌ನ ಅರೆ ಸರ್ಕಾರಿ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಮಾತುಕತೆಗಳನ್ನು ಪುನರಾರಂಭಿಸುವ ಮುನ್ನ ಲೆಬನಾನ್‌ನಲ್ಲಿ ಕದನ ವಿರಾಮ ಜಾರಿಯಾಗಬೇಕು ಎಂಬುದು ಟೆಹ್ರಾನ್‌ನ ನಿಲುವಾಗಿದೆ ಎಂದು ಪ್ರಾದೇಶಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ವರದಿಯನ್ನು ತಳ್ಳಿಹಾಕಿದ್ದು, ಕದನ ವಿರಾಮಕ್ಕೆ ಸಂಬಂಧಿಸಿದ ಮಾತುಕತೆಗಳು ಮುಂದುವರಿದಿವೆ ಎಂದು ಹೇಳಿದ್ದಾರೆ ಎಂದು ಎಪಿ ವರದಿ ಮಾಡಿದೆ.