UAE | ರಸ್ತೆ ಅಪಘಾತದಲ್ಲಿ ಭಾರತೀಯರ ಸಹಿತ 13 ಮಂದಿ ಮೃತ್ಯು
Photo Credit : X
ಅಬುಧಾಬಿ, ನ.24: ಮಂಗಳವಾರ ರಾಸ್ ಅಲ್ ಖೈಮಾದಲ್ಲಿ ನಡೆದ ಬಸ್ ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಭಾರತೀಯರೂ ಸೇರಿದ್ದಾರೆ ಎಂದು UAE ಆಂತರಿಕ ಸಚಿವಾಲಯ ವರದಿ ಮಾಡಿದೆ.
41 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ತಾಂತ್ರಿಕ ದೋಷದಿಂದಾಗಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಮಂಗಳವಾರ ಮುಂಜಾನೆ ಸದರ್ನ್ ರಿಂಗ್ ರೋಡ್ ನ ಅಲ್ ವತನ್ ಸ್ಟ್ರೀಟ್ ನಲ್ಲಿ ಈ ಘಟನೆ ಸಂಭವಿಸಿದೆ. ಆರಂಭದಲ್ಲಿ 11 ಮಂದಿ ಮೃತಪಟ್ಟಿದ್ದರು. ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟ ಬಳಿಕ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಮತ್ತು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತಪಟ್ಟವರಲ್ಲಿ ಭಾರತೀಯ ಪ್ರಜೆಗಳೂ ಸೇರಿದ್ದಾರೆ ಎಂದು ದುಬೈನಲ್ಲಿರುವ ಭಾರತೀಯ ಕಾನ್ಸುಲೇಟ್ ದೃಢಪಡಿಸಿದೆ. ಸಂತ್ರಸ್ತರ ಕುಟುಂಬಗಳನ್ನು ಈಗಾಗಲೇ ಸಂಪರ್ಕಿಸಲಾಗಿದ್ದು, ಅಗತ್ಯವಿರುವ ಎಲ್ಲ ನೆರವು ಮತ್ತು ಬೆಂಬಲವನ್ನು ನೀಡಲು ಸ್ಥಳೀಯ ಅಧಿಕಾರಿಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸಲಾಗುತ್ತಿದೆ ಎಂದು ತಿಳಿಸಿದೆ.