ಪಿಓಕೆ ಹಿಂಸಾಚಾರದ ಕುರಿತು ತನಿಖೆ ನಡೆಸುವಂತೆ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆ ಆಗ್ರಹ
ಸಾಂದರ್ಭಿಕ ಚಿತ್ರ | Photo Credit : PTI
ವಿಶ್ವಸಂಸ್ಥೆ, ಜು.17: ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ (ಪಿಒಕೆ) ಹೆಚ್ಚುತ್ತಿರುವ ಅಶಾಂತಿಯ ಬಗ್ಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ವೋಲ್ಕರ್ ಟರ್ಕ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಜುಲೈ 27 ರಂದು ನಡೆಯಲಿರುವ ಶಾಸನಸಭೆ ಚುನಾವಣೆಗೂ ಮುನ್ನ ಅಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆಯ ಸಾವು-ನೋವುಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕರೆ ನೀಡಿದ್ದಾರೆ.
ಪಾಕಿಸ್ತಾನದ ಅಧಿಕಾರಿಗಳು ಸಂಯಮದಿಂದ ವರ್ತಿಸಬೇಕು, ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಮತ್ತು ವರದಿಯಾದ ಹಿಂಸಾಚಾರಕ್ಕೆ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮುಂಬರುವ ಚುನಾವಣೆಗೆ ಸಂಬಂಧಿಸಿದಂತೆ ಜೂನ್‍ನಿಂದ ನಡೆಯುತ್ತಿರುವ ಪ್ರತಿಭಟನೆಗಳ ಸಮಯದಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಹಲವಾರು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ವರದಿಯಾದ ಎಲ್ಲಾ ಸಾವುಗಳ ಬಗ್ಗೆ ತ್ವರಿತ, ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಿ ಇದಕ್ಕೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಟರ್ಕ್ ಒತ್ತಿ ಹೇಳಿದ್ದಾರೆ.
ಪ್ರತಿಭಟನೆಯ ನೇತೃತ್ವ ವಹಿಸಿರುವ `ಜಮ್ಮು ಕಾಶ್ಮೀರ್ ಜಾಯಿಂಟ್ ಅವಾಮಿ ಆಕ್ಷನ್ ಕಮಿಟಿ' (ಜೆಕೆಜೆಎಎಸಿ) ಅನ್ನು ನಿಷೇಧಿಸುವ, ಈ ಪ್ರದೇಶದ ಕೆಲವು ಭಾಗಗಳಲ್ಲಿ ಇಂಟರ್ನೆಟ್ ನಿಷೇಧಿಸಿರುವ ಪಾಕಿಸ್ತಾನದ ಕ್ರಮದ ಬಗ್ಗೆಯೂ ಟರ್ಕ್ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ಕ್ರಮಗಳು ಮುಕ್ತ ವಾಕ್ ಸ್ವಾತಂತ್ರ್ಯ, ಶಾಂತಿಯುತ ಸಭೆ ಮತ್ತು ಸಂಘಟನೆಯ ಹಕ್ಕುಗಳನ್ನು ಉಲ್ಲಂಘಿಸಬಹುದು ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ.